ಡಾ: ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‍ನ ಶೈಕ್ಷಣಿಕ ಪ್ರಾರಂಭೋತ್ಸವಕ್ಕೆ ಚಾಲನೆ

Source: sonews | By Staff Correspondent | Published on 5th October 2017, 3:53 PM | State News | National News | Don't Miss |

ಆರ್ಥಿಕ ಶಿಸ್ತು ಕಾಯ್ದುಕೊಂಡ ಕರ್ನಾಟಕ: ಡಾ. ಮನ್‍ಮೋಹನ್ ಸಿಂಗ್ ಮೆಚ್ಚುಗೆ

ಬೆಂಗಳೂರು: ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ಆರ್ಥಿಕ ಶಿಸ್ತನ್ನು ಕಾಯ್ದುಕೊಂಡಿರುವ ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾರತದ ಮಾಜಿ ಪ್ರಧಾನಿ ಹಾಗೂ ಆರ್ಥಿಕ ತಜ್ಞ ಡಾ: ಮನ್‍ಮೋಹನ್‍ಸಿಂಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಡಾ: ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‍ನ ಶೈಕ್ಷಣಿಕ ಪ್ರಾರಂಭೋತ್ಸವದ ಉದ್ಘಾಟಿಸಿ ಮಾತನಾಡಿದರು. 12 ಆಯವ್ಯಯಗಳನ್ನು ಸಿದ್ದಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8165 ಕೋಟಿ ರೂ.ಗಳಷ್ಟು ರೈತರ ಸಾಲ ಮನ್ನಾ ಮಾಡಿದ ನಂತರವೂ ರಾಜ್ಯದಲ್ಲಿ ಉತ್ತಮ ಆರ್ಥಿಕಸ್ಥಿತಿಯನ್ನು ಕಾಯ್ದುಕೊಂಡಿದ್ದಾರೆ. ಯು.ಪಿ.ಎ. ಸರ್ಕಾರದ ಆಹಾರ ಭದ್ರತಾ ಕಾಯ್ದೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಇಂತಹ ಸಾಮಾಜಿಕ ಕಳಕಳಿಯ ಯೋಜನೆಯನ್ನು ಜಾರಿಗೊಳಿಸುವುರೊಂದಿಗೆ ಆರ್ಥಿಕ ಶಿಸ್ತನ್ನು ಕಾಯ್ದುಕೊಂಡಿದ್ದಾರೆ. ಕರ್ನಾಟಕ ರಾಜ್ಯವು ಆರ್ಥಿಕ ಶಿಸ್ತನ್ನು ಕಾಯ್ದುಕೊಂಡಿರುವ ಅತ್ಯುತ್ತಮ ರಾಜ್ಯಗಳಲ್ಲಿ ಒಂದು ಎಂದು ಬಣ್ಣಿಸಿದ ಅವರು ಇದಕ್ಕಾಗಿ ಮುಖ್ಯಮಂತ್ರಿಯವರನ್ನು ಅಭಿನಂದಿಸಿದರು.

ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು ಯೋಜನಾ ಆಯೋಗವನ್ನು ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಅಸಮಾನತೆಯನ್ನು ನಿಯಂತ್ರಣಕ್ಕೆ ತರಲು ಹೊಸ ಪ್ರಯತ್ನಗಳ ಅಗತ್ಯವಿದೆ. ಹೊಸ ರೂಪದ ಸಾಮಾಜಿಕ, ಆರ್ಥಿಕ ನೀತಿಯನ್ನು ರೂಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾದ ಬೆಂಗಳೂರಿನಲ್ಲಿ ಡಾ: ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಭವಿಷ್ಯದಲ್ಲಿ ದೇಶದ ಅತ್ಯುತ್ತಮ ದರ್ಜೆಯ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ದೇಶದ ಜ್ಞಾನರ್ಜನೆಯ ರಾಜಧಾನಿ ಎಂದೇ ಗುರುತಿಸಿಕೊಂಡಿರುವ ಬೆಂಗಳೂರಿನಲ್ಲಿ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳು ನೆಲೆಸಿವೆ. ಈ ಸಂಸ್ಥೆಗಳ ಪಟ್ಟಿಗೆ ಬೆಂಗಳೂರು ಡಾ: ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಒಂದು ಮೌಲ್ಯಯುತ ಸೇರ್ಪಡೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂಸ್ಥೆಯು ಥಿಯರಿಟಿಕಲ್ ಮತ್ತು ಅಪೈಡ್ ವಿಷಯಗಳೊಂದಿಗೆ ಇತರ ಸಮಾಜ ಶಾಸ್ತ್ರದ ವಿಷಯಗಳ ಬೋಧನೆ ಹಾಗೂ ಸಂಶೋಧನೆಗೆ ಒತ್ತು ನೀಡುವುದರೊಂದಿಗೆ ಯುವ ಅರ್ಥಶಾಸ್ತ್ರಜ್ಞರಿಗೆ ಉನ್ನತ ಗುಣಮಟ್ಟದ ಸಂಶೋಧನೆ ಕೈಗೊಳ್ಳಲು ಹೆಚ್ಚಿನ ಅವಕಾಶ ಒದಗಿಸಲಿದೆ ಎಂದು ನುಡಿದರು.

ತಾವು ದಾಖಲೆ 12 ಬಾರಿ ಆಯವ್ಯಯ ಮಂಡಿಸಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿ ಅವರು ನನ್ನ ಪ್ರತಿ ಆಯವ್ಯಯ ಎಲ್ಲರನ್ನು ಒಳಗೊಂಡ ಅಭಿವೃದ್ಧಿಯ ನಿಟ್ಟಿನಲ್ಲಿ ವಿಶೇಷ ಪ್ರಯತ್ನವಾಗಿದೆ. ಒಬ್ಬ ಸಾಮಾನ್ಯ ಮನುಷ್ಯನಾಗಿ ನನ್ನ ಅನುಭವದ ಹಿನ್ನೆಲೆಯಲ್ಲಿ ಆದ್ಯತೆಗಳನ್ನು ಉತ್ತಮವಾಗಿ ಗುರುತಿಸಿದ್ದೇನೆ. ಶಿಕ್ಷಣ ನನ್ನ ಆದ್ಯತೆಯ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ಕಾರಣಕ್ಕಾಗಿಯೇ ಡಾ: ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‍ನ ಸ್ಥಾಪನೆಗೆ ಆಯವ್ಯದಲ್ಲಿ 200 ಕೋಟಿ ರೂ. ಒದಗಿಸಿದ್ದೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ಹಾಗೂ ಮದ್ರಾಸ್ ಸ್ಕೂಲ್ ಆಫ್ ಎಕನಾಮಿಕ್ಸ್‍ನ ಡಾ: ಸಿ. ರಂಗರಾಜನ್ ಅವರು ಮಾತನಾಡಿ ದೇಶದಲ್ಲಿ ಕುಸಿಯುತ್ತಿರುವ ಆರ್ಥಿಕತೆಗೆ ನೆನೆಗುದ್ದಿಗೆ ಬಿದ್ದಿರುವ ಯೋಜನೆಗಳ ತ್ವರಿತ ಅನುಷ್ಠಾನ, ಸಾಲ ನೀತಿಯನ್ನು ಚುರುಕುಗೊಳಿಸುವುದು ಹಾಗೂ ಉದ್ಯಮಿಗಳೊಂದಿಗೆ ಸಮಸ್ಯೆಗಳ ಕುರಿತು ಚರ್ಚಿಸುವ ಮೂಲಕ ಪರಿಹಾರ ಕಂಡುಕೊಳ್ಳಬೇಕಾಗಿದೆ. ಹೂಡಿಕೆಗೆ ಸೂಕ್ತ ವಾತಾವರಣ ನಿರ್ಮಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಡಾ: ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‍ನ(ಃಂSಇ) ನಲ್ಲಿ ಅರ್ಥಶಾಸ್ತ್ರದ ಜೊತೆಗೆ ಗಣಿತಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರವನ್ನು ಭೋಧಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದಕ್ಷಿಣ ಭಾರತದಲ್ಲಿ ಅರ್ಥಶಾಸ್ತ್ರದೊಂದಿಗೆ ಈ ವಿಷಯಗಳನ್ನು ಕಲಿಸದಿರುವ ಕಾರಣ ಸ್ನಾತಕೋತ್ತರ ಹಂತದಲ್ಲಿ ವಿದ್ಯಾರ್ಥಿಗಳಿಗೆ ಅರ್ಥಶಾಸ್ತ್ರದ ಸಿದ್ದಾಂತಗಳನ್ನು ಕಷ್ಟಕರವಾಗುತ್ತಿದೆ ಎಂದು ನುಡಿದರು. ಅರ್ಥಶಾಸ್ತ್ರದ ಸಿದ್ದಾಂತಗಳನ್ನು ಸ್ಥಳೀಯ ಹಾಗೂ ಜಾಗತಿಕ ಮಟ್ಟದಲ್ಲಿ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಲು ಬಳಸಬೇಕು. ಈ ನಿಟ್ಟಿನಲ್ಲಿ ಈ ಸಂಸ್ಥೆಯು ಅತ್ಯುನ್ನುತ ಕೊಡುಗೆ ನೀಡುವುದು ಎಂದು ಅವರು ಆಶಿಸಿದರು.

ಭಾರತದಲ್ಲಿ ಉನ್ನತ ಶಿಕ್ಷಣವು ಕವಲು ಹಾದಿಯಲ್ಲಿದೆ. ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಬೇಕು. ಜೊತೆಗೆ ಸಮಾಜದಲ್ಲಿ ನಿರ್ಲಕ್ಷ್ಯಕ್ಕೊಳಗಾದ ವರ್ಗದವರಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪಠ್ಯಗಳು ಕಾಲಕ್ಕೆ ತಕ್ಕಂತೆ ಬದಲಾಗಬೇಕು. ನೆನಪು ಶಕ್ತಿಯನ್ನು ಆಧರಿಸಿದ ಮೌಲ್ಯಮಾಪನದ ಬದಲು ವಿಶ್ಲೇಷಣೆಯನ್ನು ಆಧರಿಸಿದ ಮೌಲ್ಯಮಾಪನ ಜಾರಿಗೆ ಬರಬೇಕು ಎಂದು ನುಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಡಾ: ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‍ನ(ಃಂSಇ) ಇಂದು 50 ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಚಟುವಟಿಕೆ ಆರಂಭಿಸಿದೆ. ಇದರಲ್ಲಿ ಶೇ. 60 ರಷ್ಟು ವಿದ್ಯಾರ್ಥಿಗಳು ಕರ್ನಾಟಕದವರು ಎನ್ನುವುದು ಸಂತಸದ ವಿಚಾರ. ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಸಾಮಾನ್ಯ ದಾಖಲಾತಿ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ವಸತಿಯುತ ಪ್ರಥಮ ದರ್ಜೆ ಕಾಲೇಜುಗಳನ್ನು ಪ್ರಾರಂಭಿಸಲಾಗುತ್ತಿದೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ರಾಜ್ಯದ ಸಾಮಾನ್ಯ ದಾಖಲಾತಿ ಪ್ರಮಾಣವು (ಜಿ.ಇ.ಆರ್.) 28 ಆಗಿದ್ದು ಇದು ದೇಶದ ಒಟ್ಟಾರೆ ಸರಾಸರಿಗಿಂತ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಇದನ್ನು 40 ಕ್ಕೆ ಏರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕ ಆರ್.ಎಸ್. ದೇಶಪಾಂಡೆ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಬಿ. ದ್ಯಾಬೇರಿ ವಂದಿಸಿದರು.

ಸಮಾರಂಭದಲ್ಲಿ ನಗರಾಭಿವೃದ್ಧಿ ಮತ್ತು ಹಜ್ ಸಚಿವ ಆರ್. ರೋಷನ್‍ಬೇಗ್, ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ, ಲೋಕೋಪಯೋಗಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಗೃಹ ಸಚಿವ ರಾಮಲಿಂಗಾರೆಡ್ಡಿ, ಕಾನೂನು ಸಚಿವ ಟಿ.ಬಿ. ಜಯಚಂದ್ರ, ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ; ಜಿ. ಪರಮೇಶ್ವರ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‍ಚಂದ್ರ ಕುಂಠಿಆ ಮೊದಲಾದವರು ಹಾಜರಿದ್ದರು.

 

Read These Next

ಮೋದಿ ಸಂಪುಟದಲ್ಲಿ ರಾಜ್ಯಕ್ಕೆ ಮೂವರು ಸಚಿವ ಖಾತೆ, ಜೋಷಿ, ಡಿವಿಎಸ್, ಸುರೇಶ್ ಅಂಗಡಿಗೆ ಖಾತೆ ಹಂಚಿಕೆ

ಪ್ರಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ  ಸಚಿವ ಸಂಪುಟದ ಖಾತೆ ಹಂಚಿಕೆ ತೀರ್ಮಾನವಾಗಿದ್ದು ರಾಜ್ಯದ ಮೂವರು ...

ಅಮಿತ್ ಶಾಗೆ ಗೃಹ ಖಾತೆ, ರಾಜನಾಥ್ ಸಿಂಗ್ ಗೆ ರಕ್ಷಣೆ; ಮೋದಿ ಹೊಸ ಸರ್ಕಾರದ ಸಚಿವರ ಖಾತೆ ಹಂಚಿಕೆ ಪಟ್ಟಿ ಇಲ್ಲಿದೆ

2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ...