ಕೋಲಾರ: ಕುಡಿಯುವ ನೀರಿನ ಪೂರೈಕೆಗೆ ಪ್ರಥಮ ಆದ್ಯತೆ ನೀಡಿ-ಬಿ.ಬಿ.ಕಾವೇರಿ

Source: shabbir | By Arshad Koppa | Published on 12th August 2017, 8:06 AM | Coastal News | Special Report |

ಕೋಲಾರ, ಆಗಸ್ಟ್ 11 :    ಹೋಟೆಲ್ ಮತ್ತು ಇತರೆ ಖಾಸಗಿ ಉದ್ದಿಮೆಗಳಿಗಿಂತ ಹೆಚ್ಚಾಗಿ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 
    ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಮ್ಮ ಆನಂದರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ವೇಮಗಲ್‍ನಲ್ಲಿ ನೀರಿನ ಸಮಸ್ಯೆ ಇರುವ ಕುರಿತು ವರದಿ ಇದ್ದು ಕೂಡಲೇ ಸಮಸ್ಯೆ ಪರಿಹರಿಸಬೇಕೆಂದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. 
    ನೀರಿನ ಸಮಸ್ಯೆ ಬಗೆಹರಿಸಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೇಳಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ, ಜಿಲ್ಲೆಯಲ್ಲಿ ಒಟ್ಟು 66 ಸಮಸ್ಯಾತ್ಮಕ ಗ್ರಾಮಗಳಿದ್ದು ಈ ಪೈಕಿ 33 ಗ್ರಾಮಗಳಿಗೆ ಟ್ಯಾಂಕರ್ ಮೂಲಕ, 31 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರನ್ನು ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. 
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಕುರಿತು ಜಿಲ್ಲಾ ಸಾಮಾಜಿಕ ಮತ್ತು ನ್ಯಾಯ ಸಮಿತಿ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್ ಅವರು ಕೇಳಿದ ಪ್ರಶ್ನೆಗೆ ಡಿ.ಹೆಚ್.ಓ ವಿಜಯ್ ಕುಮಾರ್ ಅವರು, ಜಿಲ್ಲೆಯಲ್ಲಿ ಇಲ್ಲಿಯವರೆಗೆ 186 ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳಾಗಿ ಜನರಿಗೆ ನೈರ್ಮಲ್ಯ, ಸೊಳ್ಳೆಗಳಿಂದ ರಕ್ಷಣೆಗೆ ಅಗತ್ಯ ಮಾಹಿತಿಯನ್ನು ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‍ಗಳ ಮೂಲಕ ನೀಡಲಾಗುತ್ತಿದೆ. ಜಿಲ್ಲೆಗೆ 6 ಜನ ತಜ್ಞ ವೈದ್ಯರ ನೇಮಕ ಮಾಡಿಕೊಳ್ಳಲಾಗಿದೆ ಎಂದು ಉತ್ತರಿಸಿದರು. 
    ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟೆಲ್‍ಗಳಿಗೆ ಮೂಲಭೂತ ಸೌಕರ್ಯಗಳಿಲ್ಲ ಎಂದ ಕುರಿತು ಸ್ಥಾಯಿ ಸಮಿತಿ ಅಧ್ಯಕ್ಷರು ಸಭೆಯ ಗಮನ ಸೆಳೆದಾಗ, ಇದಕ್ಕೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಜಯಣ್ಣ ಅವರು, ಹಾಸ್ಟೆಲ್‍ಗಳ ವ್ಯವಸ್ಥೆಯನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮೂಲಭೂತ ಸೌಕರ್ಯಗಳು ಇಲ್ಲದ ಕಡೆಗೆ ಕೂಡಲೇ ಎಲ್ಲಾ ರೀತಿಯ ಸೌಲಭ್ಯ ನೀಡಲಾಗುವುದು ಎಂದರು. 
ಕೋಲಾರ ತಾಲ್ಲೂಕಿನ ಎಲ್ಲಾ ಹಾಸ್ಟೆಲ್‍ಗಳಿಗೂ ಬಿಸಿ ನೀರಿನ ಸೋಲಾರ್ ವ್ಯವಸ್ಥೆಯನ್ನು ವಾರದೊಳಗೆ ಕಲ್ಪಿಸಲಾಗುವುದು. ಎಲ್ಲಾ ಹಾಸ್ಟೆಲ್‍ಗಳಿಗೂ ಸೂಕ್ತ ರೀತಿಯಲ್ಲಿ ಆಹಾರ ಪದಾರ್ಥಗಳ ಪೂರೈಕೆಗೆ ಕ್ರಮವಹಿಸಲಾಗುವುದು ಎಂದ ಅವರು, ಜಿಲ್ಲೆಯಲ್ಲಿ 65 ವಾರ್ಡನ್ ಹುದ್ದೆಗಳು ಖಾಲಿ ಇವೆ. ಹೊಸದಾಗಿ 8 ಮೊರಾರ್ಜಿ ದೇಸಾಯಿ, 3 ಕಿತ್ತೂರು ರಾಣ  ಚೆನ್ನಮ್ಮ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಕಳೆದ ವರ್ಷ 4,050 ವಿದ್ಯಾರ್ಥಿಗಳು ದಾಖಲಾಗಿದ್ದು ಈ ಬಾರಿ 5 ಸಾವಿರ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯ ಪಡೆದಿದ್ದಾರೆ ಎಂದು ತಿಳಿಸಿದರು. 
ಶಿಕ್ಷಣ ಇಲಾಖೆಯ ಕುರಿತು ನಡೆದ ಚರ್ಚೆಗೆ ಉಪನಿರ್ದೇಶಕರಾದ ಸ್ವಾಮಿ ಅವರು, ಜಿಲ್ಲೆಯಲ್ಲಿ 60 ಪ್ರೌಢ ಶಾಲಾ ಶಿಕ್ಷಕರು ಹಾಗೂ 258 ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ಇದ್ದು ಕೊರತೆ ನೀಗಿಸಲು ಈ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನಾಗಿ 60 ಪೌಢ ಶಾಲಾ ಶಿಕ್ಷಕರನ್ನು ಹಾಗೂ 214 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆಯಲ್ಲಿ ಒಟ್ಟಾರೆ ಬೌತಿಕ ಸಾಧನೆ ತೃಪ್ತಿಕರವಾಗಿದೆ. ಆರ್ಥಿಕ ಸಾಧನೆ ಕಡಿಮೆ ಇದೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಸೂಚನೆಗಳನ್ನು ನೀಡುವುದು ಬಿಟ್ಟು ಕ್ಷೇತ್ರಗಳಿಗೆ ಹೋಗಿ ಜನರ ಸಮಸ್ಯೆಗಳನ್ನು ಗುರುತಿಸಿ ಸೂಕ್ತ ನಿವಾರಣಾ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು. 
ಕೆ.ಡಿ.ಪಿ ಸಭೆಯು ಎಲ್ಲಾ ಸಭೆಗಳಿಗಿಂತ ಪ್ರಮುಖವಾದುದು. ಇದು ಜಿಲ್ಲೆಯ ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವ ಸಭೆ. ಈ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಖುದ್ದು ಹಾಜರಾಗಬೇಕು. ಈ ಸಭೆಯ ಕುರಿತು ನಿರ್ಲಕ್ಷ್ಯ ವಹಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. 
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...