ಬಿಜೆಪಿ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಹಲವೆಡೆ ಪ್ರತಿಭಟನೆ, ಆಕ್ರೋಶ

Source: Vb | By I.G. Bhatkali | Published on 15th March 2024, 7:44 PM | State News |

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಹಲವೆಡೆ ಟಿಕೆಟ್ ವಂಚಿತರ ಬೆಂಬಲಿಗರು, ಪಕ್ಷದ ಕಾರ್ಯಕರ್ತರು, ಪ್ರತಿಭಟನೆಗಳನ್ನು ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪತ್ರನಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ಯಡಿಯೂರಪ್ಪಗೆ ಸಡ್ಡು ಹೊಡೆಯುವ ಸೂಚನೆ ನೀಡಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಪಡೆಯಲು ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಟಿಕೆಟ್ ಕೈ ತಪ್ಪಿರುವುದರಿಂದ ಸಂಸದ ಜಿ.ಎಂ.ಸಿದ್ದೇಶ್ವರ್ ವಿರುದ್ಧ ಆಕ್ರೋಶ ಹೊರ ಹಾಕಿ ದ್ದಾರೆ. ಸಿದ್ದೇಶ್ವರ್ ಅವರ ಪತ್ನಿಗೆ ಘೋಷಿಸಿರುವ ಟಿಕೆಟ್ ಅನ್ನು ರದ್ದುಗೊಳಿಸಿ ತಮಗೆ ಅವಕಾಶ ಮಾಡಿಕೊಡಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಕೊಪ್ಪಳ ಕ್ಷೇತ್ರದಲ್ಲಿ ಹಾಲಿ ಸಂಸದ ಕರಡಿ ಸಂಗಣ್ಣಗೆ ಟಿಕೆಟ್ ಕೈತಪ್ಪಿರುವುದರಿಂದ ಅವರ ಬೆಂಬಲಿಗರು ಆಕ್ರೋಶ ಗೊಂಡಿದ್ದಾರೆ. ಇದೇ ಸಿಟ್ಟಿನಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿದ್ದಾರೆ. ಅಲ್ಲದೆ, ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಭ್ಯರ್ಥಿ ಯಾಗಿ ಘೋಷಣೆಯಾಗಿರುವ ಡಾ.ಕೆ. ಬಸವರಾಜ ಜೊತೆಯೂ ಮಾತಿನ ಚಕಮಕಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾ ಧ್ಯಕ್ಷ ವಿಜಯೇಂದ್ರ ವಿರುದ್ದವೂ ಧಿಕ್ಕಾರಗಳನ್ನು ಕೂಗಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷೆ ಯಾಗಿದ್ದ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಕಡೆಗಣಿಸಿ, ವಿ.ಸೋಮಣ್ಣಗೆ ಟಿಕೆಟ್ ನೀಡಿರುವುದು ತುಮ ಕೂರು ಜಿಲ್ಲಾ ಬಿಜೆಪಿ ವಲಯದಲ್ಲಿ ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ.

ಸೋಮಣ್ಣ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದ ಆರಂಭದಲ್ಲೇ ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು.

ಯಾವುದೇ ಕಾರಣಕ್ಕೂ ಹೊರಗಿನವರಿಗೆ ಟಿಕೆಟ್ ನೀಡಬಾರದು ಎಂದು ಮಾಧುಸ್ವಾಮಿ ಒತ್ತಾಯಿಸಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ವಿರೋಧದ ನಡುವೆಯೂ ಸೋಮಣ್ಣಗೆ ಮಣೆ ಹಾಕಿದೆ. ಇದರಿಂದ ಬೇಸತ್ತಿರುವ ಮಾಧುಸ್ವಾಮಿ ಚುನಾವಣೆಯ ಪ್ರಚಾರ ಕಾರ್ಯದಿಂದ ಹಿಂದಕ್ಕೆ ಸರಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ ಸಿಂಹ ಬದಲು ರಾಜವಂಶಸ್ಥ ಯದುವೀ‌ರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಅಲ್ಲಿಯೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಬೇಕೆಂಬ ಅಭಿಲಾಷೆ ಹೊಂದಿದ್ದ ಸಂಸದೆ ಸುಮಲತಾ ಅಂಬರೀಷ್‌ಗೆ ಬಿಜೆಪಿ ಹೈಕಮಾಂಡ್ ಕೈ ಕೊಟ್ಟಿದ್ದು ಅವರು ಅಡಕತ್ತರಿಯಲ್ಲಿ ಸಿಲುಕಿ ಕೊಂಡಂತಾಗಿದೆ. ಈಗಾಗಲೇ, ಕಾಂಗ್ರೆಸ್ ಪಕ್ಷ ಮಂಡ್ಯದಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಮೈತ್ರಿ ಮಾತುಕತೆಯಂತೆ ಬಿಜೆಪಿಯು ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಸುಮಲತಾ ಅತ್ತ ಬಿಜೆಪಿಯಲ್ಲೂ ಇರದೆ, ಕಾಂಗ್ರೆಸ್ ಗೂ ಬರದಂತಹ ಪರಿಸ್ಥಿತಿ ಸೃಷ್ಟಿಸಿಕೊಂಡಿದ್ದು, ಪಕ್ಷೇತರ ಅಭ್ಯರ್ಥಿಯಾಗಿಯೇ ಮತ್ತೊಮ್ಮೆ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...