ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.

Source: SO News | By Laxmi Tanaya | Published on 23rd April 2024, 8:36 AM | State News | Don't Miss |

ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ಅಭ್ಯರ್ಥಿಯು ತಮ್ಮ ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಂಡಿದ್ದು, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದ ಕೆಸ್ವಾನ್ ವಿಡಿಯೋ (ವಿಸಿ ಹಾಲ್) ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಏ.12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಯ ಅವಧಿಯಲ್ಲಿ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಏ.20 ರಂದು ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮವಾಗಿದ್ದವು. ನಾಮಪತ್ರ ವಾಪಸ್ಸು ಪಡೆಯುವ ದಿನವಾದ ಏ.22 (ಸೋಮವಾರ) ರಂದು ಪಕ್ಷೇತರ ಅಭ್ಯರ್ಥಿ ಬಿ.ಭಾಗ್ಯಲಕ್ಷ್ಮಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ತಿಳಿಸಿದರು.

ಅಂತಿಮವಾಗಿ 10 ಅಭ್ಯರ್ಥಿಗಳು: ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ವಾಲ್ಮೀಕಿ ಕೃಷ್ಣಪ್ಪ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ.ಶ್ರೀರಾಮುಲು, ಅದೇರೀತಿಯಾಗಿ ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ (ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳನ್ನು ಹೊರತುಪಡಿಸಿ) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಸಿ.ಚನ್ನವೀರ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಪಕ್ಷದ ಅಭ್ಯರ್ಥಿ ಎ.ದೇವದಾಸ್, ಪ್ರಹರ್ ಜನಶಕ್ತಿ ಪಾರ್ಟಿಯ ಅಭ್ಯರ್ಥಿ ಮಂಜಪ್ಪ, ನವಭಾರತ್ ಸೇನ ಪಕ್ಷದ ಅಭ್ಯರ್ಥಿ ಜಿ.ಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಅರುಣ್ ಎಸ್ ಹಿರೇಹಾಳ್, ವೈ.ಪಂಪಾಪತಿ, ವೀರೇಶ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಾಗಿದ್ದಾರೆ ಎಂದು ವಿವರಿಸಿದರು.
ಈಗಾಗಲೇ ಪಕ್ಷೇತರ ಅಭ್ಯರ್ಥಿಗಳಿಗೆ ಚಿಹ್ನೆ ಕೂಡ ಹಂಚಿಕೆ ಮಾಡಲಾಗಿದ್ದು, ಮೇ 07 ರಂದು ಮತದಾನ ನಡೆಯಲಿದೆ ಎಂದರು.

ಮತದಾನ ದಿನದಂದು ಅಗತ್ಯ ವ್ಯವಸ್ಥೆ : ಬೇಸಿಗೆ ಬಿಸಿಲಿರುವುದರಿಂದ ಮತದಾನ ದಿನದಂದು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮತಗಟ್ಟೆಗಳಲ್ಲಿ ಮತದಾರರು ನಿಲ್ಲಲು ನೆರಳು ಇಲ್ಲದಿರುವೆಡೆ ಶ್ಯಾಮಿಯಾನ ವ್ಯವಸ್ಥೆ ಮಾಡಲಾಗುವುದು ಅಲ್ಲದೆ  ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಹಾಗೂ ಇತರೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಮತದಾರರನ್ನು ಮತಗಟ್ಟೆಗೆ ಸೆಳೆಯಲು 40 ಸಖಿ ಮಹಿಳಾ ಮತಗಟ್ಟೆಗಳು, 12 ಎಥ್ನಿಕ್, 08 ವಿಶೇಷಚೇತನ ಹಾಗೂ 08 ಯುವ ಮತಗಟ್ಟೆಗಳು, ಥೀಮ್ ಆಧಾರಿತ 8 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.

ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.

ಚುನಾವಣಾ ಅಕ್ರಮ ತಡೆಯಲು 1950 ಟೋಲ್ ಫ್ರೀ ಸಂಖ್ಯೆ ಬಳಸಿ : ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಹಣ-ಉಡುಗೋರೆ ಹಂಚುವುದು ಹಾಗೂ ಚುನಾವಣೆ ಸಂಬಂಧಿತ ಇತರೆ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1950 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಅಥವಾ ಸಿ-ವಿಜಿಲ್ ಆಪ್ ಮೂಲಕ ದೂರು ಸಲ್ಲಿಸಬಹುದು ಎಂದರು.

ಚುನಾವಣಾ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ: ಚುನಾವಣೆ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಹಾಗೂ ಚುನಾವಣಾ ಆಯೋಗದ ನಿರ್ದೇಶನವಿದ್ದು, ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು 18 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಮಿಶ್ರಾ ಅವರು ಖಡಕ್ ಸೂಚನೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಇದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...