ಬಿಜೆಪಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಕಾಂಗ್ರೇಸ್ ಸೇರ್ಪಡೆ; ಕಾಂಗ್ರೇಸ್ ಕಡೆ ವಾಲುತ್ತಿರುವ ಬಿಜೆಪಿ ಮುಖಂಡರು

Source: SOnews | By Staff Correspondent | Published on 9th March 2023, 9:54 PM | State News |

ಬೆಂಗಳೂರು: ಬಿಜೆಪಿ ಶಿಕ್ಷಣ ಕ್ಷೇತ್ರದಲ್ಲಿ ನಡೆಸುತ್ತಿರುವ ಹಸ್ತಕ್ಷೇಪಕ್ಕೆ ಬೇಸತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಪುಟ್ಟಣ್ಣ, ಗುರುವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಪುಟ್ಟಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ಪಕ್ಷವು ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿದೆ. ಎಲ್ಲ 224 ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ಬಹಳ ಒಮ್ಮತದ ತೀರ್ಮಾನ ಬಂದಿದೆ. ಈ ಸಭೆಯ ವಿಚಾರಗಳನ್ನು ಸದ್ಯದಲ್ಲೇ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುವುದು. ಈ ಚುನಾವಣೆಯಲ್ಲಿ ನಾವು 150 ಕ್ಷೇತ್ರ ಗೆಲ್ಲುವ ಗುರಿಯತ್ತ ಸಾಗುತ್ತೇವೆ ಎಂದರು. 

ಈ ಮಧ್ಯೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತಿದ್ದಾರೆ. ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಸರಕಾರ ಇಡೀ ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಿದ್ದು, ಇದರ ವಿರುದ್ಧ ಬೇಸತ್ತು ಈ ತೀರ್ಮಾನ ಮಾಡಿದ್ದಾರೆ ಎಂದು ಅವರು ಹೇಳಿದರು.

ಈ ಸರಕಾರ ಎಸ್‍ಸಿ-ಎಸ್‍ಟಿ ವಿದ್ಯಾರ್ಥಿ ವೇತನ ಕಸಿದುಕೊಂಡಿದೆ. ಸ್ವಾಯತ್ತ ಶಿಕ್ಷಣ ಸಂಸ್ಥೆಗಳ ಮೇಲೆ ಹಸ್ತಕ್ಷೇಪ ಮಾಡುತ್ತಿದ್ದು, ಬಿಜೆಪಿ ಸರಕಾರದ ಆಲೋಚನೆಗಳನ್ನು ಶಿಕ್ಷಣ ವ್ಯವಸ್ಥೆ ಮೇಲೆ ಹೇರಲಾಗುತ್ತಿದೆ. ಪುಟ್ಟಣ್ಣ ಇನ್ನು ನಾಲ್ಕೈದು ವರ್ಷಗಳ ಅಧಿಕಾರ ಇದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಯಾವುದೆ ಶರತ್ತುಗಳಿಲ್ಲದೆ ಪಕ್ಷ ಸೇರುತ್ತಿದ್ದಾರೆ. ಇದೊಂದು ಧೈರ್ಯದ ನಡೆ ಎಂದು ಸುರ್ಜೆವಾಲ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ಸರಕಾರದ ಭ್ರಷ್ಟಾಚಾರ, ಕೋಮುವಾದ, ಅಭಿವೃದ್ಧಿಗೆ ತಿಲಾಂಜಲಿ ಇಟ್ಟು ಜನರ ಭಾವನೆ ಕೆರಳಿಸುವ ವಿಚಾರಗಳಿಗೆ ಬೇಸತ್ತು ಪುಟ್ಟಣ್ಣ ಕಾಂಗ್ರೆಸ್ ಸೇರಿದ್ದಾರೆ. ಸುಮಾರು 20 ವರ್ಷಗಳ ಕಾಲ ವಿಧಾನ ಪರಿಷತ್ ನಲ್ಲಿ ಕೆಲಸ ಮಾಡಿ ಉಪ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.

ಅಪಾರವಾದ ಅನುಭವ ಇದ್ದು, ಶಿಕ್ಷಕರ ವರ್ಗದಲ್ಲಿ ಬಹಳ ಹೆಸರು ಮಾಡಿರುವ ನಾಯಕರು. ಈ ಕ್ಷೇತ್ರಗಳಲ್ಲಿ ಶಿಕ್ಷಕರ ಸಮಸ್ಯೆ ಬಗೆಹರಿಸದಿದ್ದರೆ ಗೆಲ್ಲುವುದು ಬಹಳ ಕಷ್ಟ. ಸತತ ನಾಲ್ಕು ಬಾರಿ ಗೆಲವು ಸಾಧಿಸಿದ್ದರೆ, ಅದು ಅವರ ಜನಪರ ಕೆಲಸಕ್ಕೆ ಸಾಕ್ಷಿ. ಅವರ ಆಗಮನದಿಂದ ಪಕ್ಷಕ್ಕೆ ಶಕ್ತಿ ಬರಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಪುಟ್ಟಣ್ಣ ಮಾತನಾಡಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನಾನು ವಿಶ್ವವಿದ್ಯಾಲಯ ಅಧ್ಯಕ್ಷ, 2 ಬಾರಿ ಚುನಾಯಿತ ಸೆನೆಟ್ ಸದಸ್ಯನಾಗಿದ್ದೇನೆ. 36 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಗೆಲವು ಸಾಧಿಸಿದ್ದೇನೆ ಎಂದರು.

ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳ ಪರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕೆಲವು ಸಮಸ್ಯೆಗಳನ್ನು ಬಗೆಹರಿಸಿದ್ದು, ಮತ್ತೆ ಕೆಲವು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗಿಲ್ಲ. ಯಾವ ಉದ್ದೇಶದಿಂದ ಬಿಜೆಪಿ ಸೇರಿದೆನೋ ಅದನ್ನು ಮಾಡಲು ಸಾಧ್ಯವಾಗಿಲ್ಲ. ಅಲ್ಲಿ ಸತ್ತಂತೆ ಬದುಕುವ ಪರಿಸ್ಥಿತಿ ಇದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಶಿಕ್ಷಕರ ಕ್ಷೇತ್ರದ ಯಾವುದೇ ಸಮಸ್ಯೆಯನ್ನು ಸರಕಾರ ಬಗೆಹರಿಸಿಲ್ಲ. ನನ್ನ 20 ವರ್ಷಗಳ ರಾಜಕೀಯ ಅನುಭವದಲ್ಲಿ ಇಂತಹ ಭ್ರಷ್ಟಾಚಾರವನ್ನು ನೋಡಿಲ್ಲ. ಬಿಜೆಪಿ ಪಕ್ಷ ಸೇರಿ ತಪ್ಪು ಮಾಡಿದೆ ಎಂದು ನನ್ನ ಆತ್ಮಸಾಕ್ಷಿ ಕೇಳುತ್ತಿತ್ತು. ಶಿಕ್ಷಣ ಕ್ಷೇತ್ರದಲ್ಲಿ ನಾನು ಸೇವೆ ಮಾಡಿಕೊಂಡು ಬಂದಿದ್ದು, ಇಂದು ಪಕ್ಷದ ತತ್ವ ಸಿದ್ಧಾಂತವನ್ನು ನಂಬಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಅವರು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಪುಟ್ಟಣ್ಣ ಯಾವುದೇ ಟಿಕೆಟ್, ಅಧಿಕಾರದ ಆಕಾಂಕ್ಷೆ ಇಲ್ಲದೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ. ಅವರು ಇನ್ನು ಪಕ್ಷದ ಸದಸ್ಯತ್ವ ಸ್ಥಾನ ಪಡೆದಿಲ್ಲ. ಹೀಗಾಗಿ ಟಿಕೆಟ್ ನೀಡುವ ವಿಚಾರ ಈಗ ಪ್ರಸ್ತುತವಲ್ಲ. ಕೇಂದ್ರ ಚುನಾವಣಾ ಸಮಿತಿ ದಿನಾಂಕ ನಿಗದಿ ಮಾಡಿದ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ಪುಟ್ಟಣ್ಣ ಸೇರ್ಪಡೆ ವಿಚಾರದಲ್ಲಿ ಪಕ್ಷದಲ್ಲಿ ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ರಾಜಾಜಿನಗರ, ಚನ್ನಪಟ್ಟಣ, ಬಸವನಗುಡಿ, ರಾಮನಗರ ಸೇರಿದಂತೆ ಹಲವೆಡೆ ಅಕ್ರೋಶ ವ್ಯಕ್ತವಾಗಬಹುದು. ಇವರ ಸೇರ್ಪಡೆಯಿಂದ ತಮಗೆ ಸಮಸ್ಯೆ ಆಗಬಹುದು ಎಂಬ ಕಾರಣಕ್ಕೆ ಆಕ್ರೋಶ ಸಹಜ. ಅವರು ಬೇಷರತ್ತಾಗಿ ಪಕ್ಷ ಸೇರಲು ಅರ್ಜಿ ಸಲ್ಲಿಸಲಿದ್ದಾರೆ. ಅವರ ರಾಜೀನಾಮೆ ಸ್ವೀಕೃತವಾದ ನಂತರ ಪಕ್ಷದ ಸದಸ್ಯತ್ವ ನೀಡುತ್ತೇವೆ ಎಂದು ಅವರು ಉತ್ತರಿಸಿದರು.

ಪುಟ್ಟಣ್ಣ ಸೇರ್ಪಡೆಗೆ ವಿರೋಧ: ಪುಟ್ಟಣ್ಣ ಅವರನ್ನು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡದಂತೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಹೊರಗಡೆ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.
 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...