ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ಶಾಸಕರು! ಯತ್ನಾಳ್ ಅಸಮಾಧಾನ ?

Source: Vb | By I.G. Bhatkali | Published on 16th December 2023, 2:11 AM | State News |

ಬೆಳಗಾವಿ: ಬುಧವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ಶಾಸಕರು ಕಾಣಿಸಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಶಿವರಾಂ ಹೆಬ್ಬಾರ್ ಮತ್ತು ಎಸ್ಟಿ ಸೋಮಶೇಖರ್ ನಿನ್ನೆ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಆದರೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದ ರೆಸಾರ್ಟ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಚರ್ಚೆಗೆ ಎಡೆ ಮಾಡಿಕೊಟ್ಟಿದ್ದಾರೆ.

ವಿರೋಧ ಪಕ್ಷದ ನಾಯಕ ಅಶೋಕ್ ಜೊತೆಗೆ ಬಿಜೆಪಿ ಶಾಸಕರ ಹೊಂದಾಣಿಕೆಯ ಕೊರತೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿರುವಾಗಲೇ, ಬಿಜೆಪಿ ಶಾಸಕರು ಕಾಂಗ್ರೆಸ್ ಸಭೆಯಲ್ಲಿ ಕಾಣಿಸಿಕೊಂಡಿರುವುದು ಬಿಜೆಪಿಯ ನಾಯಕರನ್ನು ಇನ್ನಷ್ಟು ಮುಜುಗರಕ್ಕೆ ತಳ್ಳಿದೆ.

'ಬಿಜೆಪಿ ಶಾಸಕರಾದ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ನಿನ್ನೆ ರಾತ್ರಿ ಕಾಂಗ್ರೆಸ್ ಪಕ್ಷದ ಸಭೆಗೆ ಬಂದಿರಲಿಲ್ಲ. ನಾವು ಆಹ್ವಾನ ನೀಡಿದ್ದ ಭೋಜನಕೂಟಕ್ಕೆ ಮಾತ್ರ ಬಂದಿದ್ದರು.

ವಿಶ್ವನಾಥ್ ಸೇರಿದಂತೆ ಅನ್ಯ ಪಕ್ಷದ 10 ಶಾಸಕರು ಉಪಾಹಾರ ಕೂಟಕ್ಕೆ ಬಂದಿದ್ದರು. ಅನ್ಯ ಪಕ್ಷದ ಶಾಸಕರು ನಮ್ಮ ಶಾಸಕಾಂಗ ಪಕ್ಷದ ಸಭೆಗೆ ಏಕೆ ಬರುತ್ತಾರೆ' ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಿಕರಣ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಶಾಸಕರ ಮೇಲಿನ ಆರೋಪಗಳಿಗೆ ಪ್ರತಿಕ್ರಿಯಿಸಿದ ವಿರೋಧ ಪಕ್ಷದನಾಯಕ, ಬಿಜೆಪಿ ಮುಖಂಡ ಆ‌ರ್. ಅಶೋಕ್, 'ಕಾಂಗ್ರೆಸ್ ಶಾಸಕರು ಊಟಕ್ಕೆ ಕರೆದಿದ್ದರಿಂದ ನಾವು ಹೋಗಿದ್ದೆವು ಎಂದು ನಮ್ಮ ಶಾಸಕ ಎಸ್.ಟಿ. ಸೋಮಶೇಖರ್ ನನ್ನ ಬಳಿ ಹೇಳಿದ್ದಾರೆ. ಅವರಿಂದ ಯಾವುದೇ ರೀತಿಯಲ್ಲಿ ಶಿಸ್ತು ಉಲ್ಲಂಘನೆ ಆಗಿಲ್ಲ. ನಿನ್ನೆ ಸದನದಲ್ಲಿ ಬಿಜೆಪಿ ನಡೆಸಿದ ಧರಣಿಯಲ್ಲೂ ಅವರು ಭಾಗವಹಿಸಿದ್ದರು. ಆದರೂ, ನಾನು ಅವರನ್ನು ಕರೆದು ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಿ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಸಭೆಗಳನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಸಚಿವರ ಮೇಲೆ ಸಿಎಂ ಗರಂ: ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್‌,  ಶರಣಪ್ರಕಾಶ್ ಪಾಟೀಲ್, ಝಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ, ಶರಣಬಸಪ್ಪ ದರ್ಶನಾಪು‌ರ್ ಸೇರಿದಂತೆ ಕೆಲ ಸಚಿವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದನ್ನು ಕಂಡು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

ಸಚಿವರು ಹಾಗೂ ಶಾಸಕರ ನಡುವೆ ಸಮನ್ವಯತೆಗಾಗಿ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಸಚಿವರೇ ಗೈರು ಹಾಜರಾದರೆ ಹೇಗೆ? ಎಂದು ಬೇಸರ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸಚಿವರಿಗೆ ಎಚ್ಚರಿಕೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಮುಜುಗರ ಆಗುವ ಕೆಲಸ ಮಾಡಿಲ್ಲ ಸೋಮಶೇಖ‌ರ್ ಸ್ಪಷ್ಟನೆ:
ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನು ಪಾಲ್ಗೊಂಡಿಲ್ಲ. ಬದಲಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆದಿದ್ದ ಔತಣ ಕೂಟದಲ್ಲಿ ಭಾಗವಹಿಸಿದ್ದು ಸತ್ಯ. ಆದರೆ, ಬಿಜೆಪಿಗೆ ಮುಜುಗರ ತರುವೆ ಕೆಲಸವನ್ನು ನಾನು ಮಾಡಿಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬುಧವಾರ ರಾತ್ರಿ 10ಗಂಟೆಯ ವರೆಗೆ ನಾನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಇದ್ದೆ. ಅವರು ಶಾಸಕರಿಗೆ ಊಟ ಕೊಡಿಸಿದರು. ಅದೇ ರೀತಿಯಲ್ಲಿ ಡಿ.ಕೆ.ಶಿವಕುಮಾ‌ರ್ ಅವರ ಔತಣಕೂಟದಲ್ಲಿಯೂ ಪಾಲ್ಗೊಂಡಿದ್ದೇನೆ ಎಂದರು.

ಸದನದಲ್ಲಿ ಬಿಜೆಪಿ ವಿರುದ್ಧ ಯತ್ನಾಳ್ ಅಸಮಾಧಾನ:
'ಇವು (ಬಿಜೆಪಿಯವರು) ನನ್ನನ್ನು ಮಂತ್ರಿಯನ್ನೇ ಮಾಡಲಿಲ್ಲ, ಇನ್ನೂ ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆಯೇ, ನೀವೂ ಚೆನ್ನಾಗಿ ಮಾತನಾಡ್ತೀರೀ?' ಎಂದು ಬಿಜೆಪಿ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಸ್ವಪಕ್ಷದ ವಿರುದ್ಧವೇ ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯ ಬಿ.ಆರ್.ಪಾಟೀಲ್, ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಯಲ್ಲಿ ಮಾತನಾಡುತ್ತಿದ್ದವೇಳೆ ಮಧ್ಯಪ್ರವೇಶಿಸಿದ ಯತ್ನಾಳ್, ನಮ್ಮಲ್ಲಿ ಕೆಲವರು ಹೊಸದಿಲ್ಲಿಗೆ ಹೋಗಿ ಅವರಿವರ ಕೈಕಾಲು ಹಿಡಿದು ತಮ್ಮ ಕೆಲಸ ಮಾಡಿಸಿಕೊಳ್ಳುತ್ತಾರೆ. ಆದರೆ, ನನಗೆ ಅದ್ಯಾವುದೂ ಬರುವುದಿಲ್ಲ. ಹೀಗಾಗಿ ನಾನು ಮಂತ್ರಿಯೇ ಆಗಲಿಲ್ಲ ಎಂದು ತಮ್ಮ ಸಹಾಯಕತೆಯನ್ನು ತೋಡಿಕೊಂಡರು.

ಸ್ಪರ್ಧಿಸುವುದಿಲ್ಲ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧೆ ಮಾಡುವುದಿಲ್ಲ. ಕೊಡಗು-ಮೈಸೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಒತ್ತಡವಿದೆ. ಆದರೆ, ನಾನು 2028ಕ್ಕೆ ಮತ್ತೆ ಶಾಸಕನಾಗಿ ಆಯ್ಕೆ ಆಗಬೇಕೆಂಬ ಉದ್ದೇಶ ಹೊಂದಿದ್ದೇನೆ ಎಂದು ಅವರು ವಿವರಣೆ ನೀಡಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...