ಲಿಖಿತ ಒಪ್ಪಿಗೆ ನೀಡಿದರೆ ನವಗ್ರಾಮ ನಿರ್ಮಾಣ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

Source: so news | Published on 13th September 2019, 12:02 AM | State News | Don't Miss |

ಬೆಳಗಾವಿ: ಸ್ಥಳಾಂತರಕ್ಕೆ ಸಿದ್ಧವಿರುವುದಾಗಿ ನದಿತೀರದ ಗ್ರಾಮಸ್ಥರು ಲಿಖಿತವಾಗಿ ತಿಳಿಸಿದರೆ ಇಡೀ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸಂಪೂರ್ಣ ಸ್ಥಳಾಂತರಿಸಿ ನವಗ್ರಾಮಗಳಲ್ಲಿ ಶಾಲೆ, ಆಸ್ಪತ್ರೆ ಸೇರಿದಂತೆ ಎಲ್ಲ ಬಗೆಯ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಂಪಿಹೊಳಿ 
ಗ್ರಾಮಕ್ಕೆ  ಭೇಟಿ ನೀಡಿದ ಬಳಿಕ ಸುರೇಬಾನ ಗ್ರಾಮದ ಪರಿಹಾರ ಕೇಂದ್ರದಲ್ಲಿ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರವಾಹದಿಂದ ಸಂಪೂರ್ಣ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಹೊಸ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಲು ಒಂದು ವಾರದೊಳಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

ಒಂದು ಮನೆ ನಿರ್ಮಾಣಕ್ಕೆ ಒಟ್ಟಾರೆ ಐದು ಲಕ್ಷ ರೂಪಾಯಿ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲ ಕಂತಿನಲ್ಲಿ ಅಡಿಪಾಯಕ್ಕೆ ನೀಡುವ ಒಂದು ಲಕ್ಷ ರೂಪಾಯಿ ಬಳಸಿಕೊಂಡು ಕೆಲಸ ಆರಂಭಿಸಬೇಕು ಎಂದರು.

ಅಡಿಪಾಯ ಹಾಕಲು ಮುಂದಾಗುವ ಕುಟುಂಬಗಳಿಗೆ ವಾರದೊಳಗೆ ಒಂದು ಲಕ್ಷ ರೂಪಾಯಿ ಮೊದಲ ಕಂತು ಒಂದು ವಾರದೊಳಗೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಅದೇ ರೀತಿ ಮನೆಗಳ ದುರಸ್ತಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ತಾತ್ಕಾಲಿಕವಾಗಿ ಸಂತ್ರಸ್ತರಿಗೆ ಶೆಡ್ ನಿರ್ಮಾಣ ಕಾಮಗಾರಿಯನ್ನು ಮೂರ್ನಾಲ್ಕು ದಿನಗಳಲ್ಲಿ ಆರಂಭಿಸಬೇಕು ಎಂದು ಸೂಚನೆ ನೀಡಿದರು.

ವ್ಯಾಪಾರಸ್ಥರಿಗೂ ಹತ್ತು ಸಾವಿರ ಪರಿಹಾರ:

ಪ್ರವಾಹದಿಂದ ಹಾನಿಗೊಳಗಾದ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ಕೂಡ ತಲಾ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಳೆನಾಶಕ್ಕೆ ಸೂಕ್ತ ಪರಿಹಾರ ನೀಡಲು ಕೇಂದ್ರದಿಂದ ಹೆಚ್ವಿನ ಪರಿಹಾರ ನೀಡಲು ಪ್ರಯತ್ನಿಸಲಾಗುತ್ತಿದ್ದು, 
ನೇಕಾರ ಕುಟುಂಬಗಳಿಗೂ ಸೂಕ್ತ ಪರಿಹಾರ ನೀಡಲಾಗುವುದು ಎಂದರು.

ಮಗು ಸಾವು-ಐದು ಲಕ್ಷ ಪರಿಹಾರ ಚೆಕ್ ವಿತರಣೆ:

ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರದಲ್ಲಿ ಅನಾರೋಗ್ಯದಿಂದ ಮೃತಪಟ್ಟಿರುವ ದೊಡ್ಡ ಹಂಪಿಹೊಳಿ ಗ್ರಾಮದ ನಾಲ್ಕು ವರ್ಷದ ಬಾಲಕ ಅಬ್ದುಲ್‌ಸಾಬ್ ಮುಲ್ಲಾನವರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.
ಪ್ರವಾಹ ಸಂದರ್ಭದಲ್ಲಿ ನಾಪತ್ತೆಯಾಗಿರುವ ವ್ಯಕ್ತಿಯೊಬ್ಬರು ಇದುವರೆಗೆ ಪತ್ತೆಯಾಗದಿರುವುದರಿಂದ ಅವರ ಕುಟುಂಬಕ್ಕೂ ಐದು ಲಕ್ಷ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ತಡೆಗೋಡೆ-ಅಂದಾಜುಪಟ್ಟಿ ತಯಾರಿಸಲು ಸೂಚನೆ:

ಮಲಪ್ರಭಾ ನದಿ ದಂಡೆಯ ತಡೆಗೋಡೆ ಒಡೆದ ಪರಿಣಾಮ ಹಂಪಿಹೊಳಿ ಗ್ರಾಮಕ್ಕೆ ನೀರು ನುಗ್ಗುತ್ತಿರುವುದರಿಂದ ತಡೆಗೋಡೆ ನಿರ್ಮಾಣಕ್ಕೆ ಕೂಡಲೇ ಅಂದಾಜು ಪಟ್ಟಿಯನ್ನು ತಯಾರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾಧಿಕಾರರಿಗಳಿಗೆ ಸೂಚನೆ ನೀಡಿದರು.

ಗ್ರಾಮಸ್ಥರು ಹಾಗೂ ಸ್ಥಳೀಯ ಶಾಸಕರ ಒತ್ತಾಯಕ್ಕೆ ಸ್ಪಂದಿಸಿದ ಅವರು, ತಡೆಗೋಡೆ ನಿರ್ಮಿಸಲು ತಕ್ಷಣ ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೂ ಮುಂಚೆ ಮಾತನಾಡಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜತೆಗೆ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಂತ್ರಸ್ತರ ಮನೆಬಾಗಿಲಿಗೆ ಮುಖ್ಯಮಂತ್ರಿಗಳು ಬಂದಿದ್ದಾರೆ ಎಂದು ಹೇಳಿದರು.
ಮನೆಗಳ ಹಾನಿ, ಮಗ್ಗಗಳ ನಷ್ಟ ಮತ್ತು ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವುದರ ಜತೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ.
ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಸಂಪೂರ್ಣ ಮಾಹಿತಿಯಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಅವರು, ರಾಮದುರ್ಗ ತಾಲ್ಲೂಕಿನ 29 ಗ್ರಾಮಗಳು ಹಾಗೂ 9 ವಾರ್ಡಗಳನ್ನು ಶಾಶ್ವತ ಸ್ಥಳಾಂತರ ಮಾಡಲು ಮನವಿ ಮಾಡಿಕೊಂಡರು.
ಹಂಪಿಹೊಳೆ ಸಮೀಪ ಬಾಂದಾರ ನಿರ್ಮಿಸಲು ಗ್ರಾಮಸ್ಥರ ಒತ್ತಾಯವಾಗಿದೆ. ಆದ್ದರಿಂದ ಬಾಂದಾರ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು, ಎಲ್ಲ ಸಂತ್ರಸ್ತರಿಗೆ ತಲಾ ಹತ್ತು ಸಾವಿರ ರೂಪಾಯಿ ಪರಿಹಾರ ಹಣವನ್ನು ಆರ್.ಟಿ.ಜಿ.ಎಸ್. ಮೂಲಕ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ದೊಡ್ಡ ಹಂಪಿಹೊಳಿ ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಪ್ರವಾಹದಿಂದ ಉಂಟಾಗಿರುವ ಹಾನಿ ಪರಿಶೀಲಿಸಿದರು.
ತಡೆಗೋಡೆ ಒಡೆದಿದ್ದು, ಮಲಪ್ರಭಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ಬಿಟ್ಟ ನೀರು ನೇರವಾಗಿ ಗ್ರಾಮಕ್ಕೆ ನುಗ್ಗಿ ತೀವ್ರ ಹಾನಿಯಾಗಿದೆ ಎಂದು ಗ್ರಾಮಸ್ಥರು ಮುಖ್ಯಮಂತ್ರಿಗಳಿಗೆ ಮನದಟ್ಟು ಮಾಡಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಸಂಪೂರ್ಣ ಮುಳುಗಡೆಯಾಗಿರುವ ದೊಡ್ಡ ಹಂಪಿಹೊಳಿ ಹಾಗೂ ಚಿಕ್ಕ ಹಂಪಿಹೊಳಿ ಗ್ರಾಮಗಳ ಸ್ಥಳಾಂತರ ಮತ್ತು ತಡೆಗೋಡೆ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಹೊಸ ಒಡ್ಡು ನಿರ್ಮಾಣ ಸೇರಿದಂತೆ ಸೂಕ್ತ ಜಮೀನು ಗುರುತಿಸಿಕೊಟ್ಟರೆ ಶಾಶ್ವತ ಸ್ಥಳಾಂತರ ಮಾಡಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ಥಳದಲ್ಲಿಯೇ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಸ್ವಲ್ಪ ಸಮಯಾವಕಾಶ ನೀಡಿದರೆ ಎಲ್ಲ ಬಗೆಯ ನೆರವು ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.
ಸುನ್ನಾಳ ಗ್ರಾಮಕ್ಕೆ ತಕ್ಷಣ ಎರಡೂವರೆ ಕಿ.ಮೀ. ರಸ್ತೆ ನಿರ್ಮಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.

ಸವದತ್ತಿ ಶಾಸಕ ಆನಂದ ಮಾಮನಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...