ಆರೋಗ್ಯ, ಕೃಷಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಪ್ರಥಮ ಆದ್ಯತೆ: ಬಿ.ಎಸ್.ಯಡಿಯೂರಪ್ಪ

Source: so news | Published on 28th January 2020, 12:25 AM | State News | Don't Miss |

 

ಮಡಿಕೇರಿ:-ಎಲ್ಲರಿಗೂ ಆರೋಗ್ಯ, ಶಿಕ್ಷಣ, ಸರ್ವಾಂಗೀಣ ಅಭಿವೃದ್ಧಿ ನಮ್ಮ ಸರ್ಕಾರದ ಮೂಲ ಮಂತ್ರವಾಗಿದ್ದು ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧವಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿನ ಭೋದಕ ಆಸ್ಪತ್ರೆ ಆವರಣದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯ ಹೆಚ್ಚುವರಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕೊಡಗಿನಲ್ಲಿ 300 ಕೋಟಿ ವೆಚ್ಚದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ನಿರ್ಮಾಣದಿಂದ ಇನ್ನು ಉತ್ತಮ ವೈದ್ಯಕೀಯ ಸೌಲಭ್ಯವು ದೊರಕುವುದರೊಂದಿಗೆ ಬಡವರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ಅತಿವೃಷ್ಠಿಯಿಂದ ಕೊಡಗಿನಲ್ಲಿ ವ್ಯಾಪಕ ಹಾನಿ ಉಂಟಾಗಿದ್ದು ಕಳೆದ ಸಾಲಿನಲ್ಲಿ 2,333 ಮನೆಗಳಿಗೆ ಹಾನಿ ಉಂಟಾಗಿದ್ದು ಹಾನಿಗೊಳಗಾದ ಕುಟುಂಬಗಳಿಗೆ ಸೂಕ್ತ ನೆರವು ನೀಡುವುದರೊಂದಿಗೆ ಉತ್ತಮ ಬದುಕು ಕಟ್ಟಿಕೊಳ್ಳಲು ಸರ್ಕಾರವು ಎಲ್ಲಾ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ಇದೆ ಸಂದರ್ಭದಲ್ಲಿ ತಿಳಿಸಿದರು.
ಮಾದಾಪುರದಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನದಿಂದ 200 ಮನೆಗಳು, ಸರ್ಕಾರವು ನಿರ್ಮಿಸುತ್ತಿರುವ 250 ಮನೆಗಳು ಪೂರ್ಣಗೊಳ್ಳುವ ಹಂತದಲಿದ್ದು ಶೀಘ್ರದಲ್ಲಿಯೆ ನೆರೆ ಸಂತ್ರಸ್ತರಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯುರಪ್ಪ ಅವರು ತಿಳಿಸಿದರು.
ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ ಬೋಪ್ಪಯ್ಯ ಅವರು ಜಿಲ್ಲೆಯ ಅಭಿವೃದ್ಧಿಗೆ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಜಿಲ್ಲೆಯನ್ನು ಸರ್ವತೋಮುಖವಾಗಿ ಅಭಿವೃದ್ಧಿ ಕೊಡಗು ಜಿಲ್ಲೆ ಹಿಂದಿನಂತಾಗಲು ಎಲ್ಲಾ ರೀತಿಯ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.
ಉಪ ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ.ಅಶ್ವಥ್ ನಾರಾಯಣ್ ಸಿ.ಎನ್ ಅವರು ಮಾತನಾಡಿ ಕೊಡಗಿನಲ್ಲಿ ವೈದ್ಯಕೀಯ ಕಾಲೇಜನ್ನು ಇನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಿ ಇಲ್ಲಿನ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಟ್ಟು ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ದಿ ಪಡಿಸಲಾಗುವುದು ಎಂದರು.
ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಸಿಬ್ಬಂದಿ ನೇಮಿಸಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಯಶಸ್ವಿಗೊಳಿಸುವುದರೊಂದಿಗೆ ಉತ್ತಮ ಆರೋಗ್ಯ ಸೇವೆಯನ್ನು ಸರ್ವರಿಗೂ ದೊರಕಿಸಿಕೊಡಲು ಸರ್ಕಾರ ಬದ್ಧವಿರುವುದಾಗಿ ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವಥ್ ನಾರಾಯಣ್ ಅವರು ತಿಳಿಸಿದರು.
ವಸತಿ, ತೋಟಗಾರಿಕೆ ಹಾಗೂ ರೇಷ್ಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮಾತನಾಡಿ ಕೊಡಗಿನ ಜನತೆಗೆ ಉತ್ತಮ ಆರೋಗ್ಯ ಸೇವೆ ದೊರಕಿಸಿಕೊಡುವ ನಿಟ್ಟಿನಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯ ಹೆಚ್ಚುವರಿ ಕಟ್ಟಡ ನಿರ್ಮಾಣ ಮಾಡುತಿದ್ದು, ಇದರಿಂದ ಜಿಲ್ಲೆಯ ಜನತೆಗೆ ಹೆಚ್ಚಿನ ಅನುಕೂಲವಾಗುವುದಾಗಿ ಸಚಿವರು ತಿಳಿಸಿದರು.
ಅತಿವೃಷ್ಠಿಯಿಂದಾಗಿ ಜಿಲ್ಲೆಯಲ್ಲಿ ವ್ಯಾಪಕ ಹಾನಿ ಉಂಟಾಗಿದ್ದು ಕೊಡಗಿನ ಪುನರ್ ನಿರ್ಮಾಣಕ್ಕೆ ಸರ್ಕಾರವು ಬದ್ಧವಾಗಿದ್ದು ಈಗಾಗಲೇ 332 ಕೋಟಿ ರೂ ಕ್ರಿಯಾಯೋಜನೆಯನ್ನು ಜಾರಿಗೊಳಿಸಿದ್ದು ಇನ್ನು ಹೆಚ್ಚುವರಿಯಾಗಿ 442 ಕೋಟಿ ಯೋಜನೆಯನ್ನು ಅನುಮೋದಿಸುದಾಗಿ ಇದೆ ಸಂದರ್ಭದಲ್ಲಿ ಸಚಿವರು ತಿಳಿಸಿದರು.
ಅತಿವೃಷ್ಠಿಯಿಂದಾಗಿ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣಕ್ಕೆ ವಸತಿ ಇಲಾಖೆಯಿಂದ 135 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದ್ದು, ಇದರೊಂದಿಗೆ ಮನೆ ಕಳೆದುಕೊಂಡವರಿಗೆ ಪುನರ್‍ವಸತಿ ಕಲ್ಪಿಸಿ ಕೊಟ್ಟು ಜಿಲ್ಲೆಯಲ್ಲಿ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿ ಪಡಿಸಲಾಗುತ್ತದೆ. ಕಂದಾಯ ಇಲಾಖೆಯ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಮನೆ ನಿರ್ಮಾಣ ಇತರೆ ಅಭಿವೃದ್ಧಿ ಚಟುವಟಿಕೆಗಳಿಗೆ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕಟ್ಟಿಬದ್ಧವಾಗಿದ್ದು, ಅಭಿವೃದ್ಧಿ ಕೆಲಸಗಳಿಗೆ ಉತ್ತೇಜನ ನೀಡುವುದರೊಂದಿಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಅಗತ್ಯ ಪುನರ್‍ವಸತಿ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ ಭೂ ಪರಿವರ್ತನೆಗೆ ಇದ್ದಂತಹ ಅಡೆ ತಡೆಗಳನ್ನು ಸರ್ಕಾರವು ನಿವಾರಣೆ ಮಾಡಿದ್ದು, ಇದರಿಂದ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಪ್ರೋತ್ಸಾಹ ಸಿಕ್ಕಿದೆ. ಪೊನ್ನಂಪೇಟೆ ನೂತನ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದ್ದು, ತಾಲ್ಲೂಕಿನ ಅಭಿವೃದ್ಧಿಗೆ ಸಂಬಂದಿಸಿದಂತೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.
ಶಾಸಕರಾದ ಅಪ್ಪಚ್ಚು ರಂಜನ್ ಅವರು ಮಾತನಾಡಿ ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಕುಶಾಲನಗರದ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ, ಚಿಕ್ಕ ಅಳುವಾರದ ಸ್ನಾತ್ತಕೋತ್ತರ ಕೇಂದ್ರ, ಕೂಡಿಗೆಯ ಸೈನಿಕ ಶಾಲೆ, ಹೀಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಜಿಲ್ಲೆಗೆ ನೀಡಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಸರ್ಕಾರವು ಬದ್ಧವಿರುವುದಾಗಿ ಶಾಸಕರು ತಿಳಿಸಿದರು.
ಅತಿವೃಷ್ಟಿಯಿಂದ ತೊಂದರೆಗೊಳಗಾದ ಕೊಡಗು ಜಿಲ್ಲೆಗೆ ಈಗಾಗಲೇ 536 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆಯಾಗಿದ್ದು, ಈಗಾಗಲೇ ಸಕಾರವು 100 ಕೋಟಿ ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.
ಎರಡು ವರ್ಷದಲ್ಲಿ ಸಂಬವಿಸಿದ ಅತಿವೃಷ್ಟಿಯಿಂದ ಹಲವಾರು ಕೃಷಿಕರು ತಮ್ಮ ಜಮೀನನ್ನು ಕಳೆದುಕೊಂಡಿದ್ದು, ಇಂತವರಿಗೆ ಜಿಲ್ಲೆಯಲ್ಲಿ ಲಭ್ಯವಿರುವ 1 ಲಕ್ಷ ಹೆಕ್ಟೇರ್ ಸಿ ಮತ್ತು ಡಿ ಭೂಮಿಯನ್ನು ಮಂಜೂರು ಮಾಡಬೇಕೆಂದು ಹಾಗೂ ರೈತರಿಗೆ ಫಾರಂ 57, 94 ಸಿ ಮತ್ತು 94 ಸಿ ಸಿ ಅಡಿ ಪುನ: ಅರ್ಜಿಸಲ್ಲಿಸಲು ಮತ್ತೊಂದು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.
ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಕೊಡಗಿನ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಿದ್ದು ಅತಿವೃಷ್ಠಿಯಿಂದ ತೊಂದರೆಗೊಳಗಾಗಿರುವ ಕೊಡಗಿನ ಜನತೆಗೆ ಎಲ್ಲಾ ಅಗತ್ಯ ನೆರವು ನೀಡಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಜವರೇಗೌಡ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಇತರರು ಇದ್ದರು.

Read These Next

2020 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ವಿದ್ಯಾರ್ಥಿಗಳು “Online” ಮೂಲಕ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು (ಮೂಲ ದಾಖಲೆಗಳ ಜೊತೆಯಲ್ಲಿ) ಪರಿಶೀಲನೆಗಾಗಿ ತಾವು ಅಧ್ಯಯನ ...

ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ಅರ್ಜಿ ಆಹ್ವಾನ                                                         

ಬೆಂಗಳೂರು: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ (ಡಿ.ಸಿ.ಎಂ) ಬೆಂಗಳೂರು ನಗರ/ ಗ್ರಾಮಾಂತರ, ತುಮಕೂರು, ...