ಕೊಡಗಿನಲ್ಲಿ ಮುಂದುವರಿದ ಭಾರೀ ಮಳೆ; ಹಲವೆಡೆ ರಸ್ತೆ ಸಂಪರ್ಕ ಕಡಿತ: ಜನಜೀವನ ಅಸ್ತವ್ಯಸ್ತ

Source: Vb | By I.G. Bhatkali | Published on 7th August 2022, 10:28 AM | Coastal News | State News |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಶ್ಲೇಷಾ ಮಳೆ ಆತಂಕವನ್ನು ಸೃಷ್ಟಿಸಿದೆ. ಕಳೆದ ಎರಡು ದಿನಗಳಿಂದ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ರೆಡ್ ಅಲರ್ಟ್ ವಿಸ್ತರಿಸಲಾಗಿದೆ. ಜಿಲ್ಲೆಯ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

ಜೀವನದಿ ಕಾವೇರಿ ಮತ್ತೆ ಉಕ್ಕಿ ಹರಿಯಲಾರಂಭಿಸಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಏರ್ಪಟ್ಟಿದೆ. ಗಾಳಿ, ಮಳೆಯ ಆರ್ಭಟಕ್ಕೆ ರಸ್ತೆ ಸಂಪರ್ಕ ಕಡಿತವಾಗಿದೆ, ಹಲವೆಡೆ ಮರಗಳು ಧರೆಗುರುಳಿವೆ, ಮನೆಗಳು ಕುಸಿದು ಅಪಾರ ಹಾನಿ ಸಂಭವಿಸಿದೆ. ಭಾಗಮಂಡಲದ ಅಯ್ಯಂಗೇರಿ ರಸ್ತೆಯ ಮೇಲೆ ಪ್ರವಾಹದ ನೀರು ಹರಿಯುತ್ತಿದೆ. ಮಳೆಯ ಆರ್ಭಟ ಮುಂದುವರಿದಲ್ಲಿ ಮಡಿಕೇರಿ ರಸ್ತೆಯೂ ಮುಳುಗಡೆಯಾಗುವ ಸಾಧ್ಯತೆಗಳಿದೆ.

ಜಿಲ್ಲೆಯ ಗಡಿ ಭಾಗಗಳಾದ ಚೆಂಬು, ದಬ್ಬಡ್ಕ, ಸಂಪಾಜೆ ವಿಭಾಗಗಳಲ್ಲಿ ಧಾರಾಕಾರ ಮಳೆಯಿಂದ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಗಾಳಿ ಮಳೆ ಶನಿವಾರ ಮತ್ತಷ್ಟು ಬಿರುಸುಗೊಂಡ ಪರಿಣಾಮ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವು ಗ್ರಾಮಗಳು ಕಳೆದ ಒಂದು ವಾರದಿಂದ ಕಾರ್ಗತ್ತಲಿನಲ್ಲಿ ಮುಳುಗಿವೆ.

ಕಾವೇರಿ ನದಿ ಪಾತ್ರದ ನಾಪೋಕ್ಲು, ಮೂರ್ನಾಡು, ಸಿದ್ದಾಪುರ ವಿಭಾಗಗಳಲ್ಲಿಯೂ ಮಹಾಮಳೆಯಾಗುತ್ತಿದೆ. ನಾಪೋಕ್ಲು ಬಳಿಯ ಬೊಳೆಬಾಣಿಯಲ್ಲಿ ರಸ್ತೆಯ ಮೇಲೆ ಪ್ರವಾಹದ ನೀರು ಆವರಿಸಿದ್ದು, ಸಂಪರ್ಕ ಕಡಿತಗೊಂಡಿದೆ. ನಾಪೋಕ್ಲು ಚೆರಿಯಪರಂಬು -ಕಲ್ಲುಮೊಟ್ಟೆ ರಸ್ತೆಯಲ್ಲೂ ವಾಹನ ಸಂಚಾರ ಅಸಾಧ್ಯವಾಗಿದೆ.

ರಸ್ತೆ ಕುಸಿತ: ಹೊದವಾಡ ಮತ್ತು ಕೊಟ್ಟಮುಡಿ ಮೂಲಕ ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಪಾರ್ಶ್ವ ಭಾರೀ ಮಳೆಯಿಂದಾಗಿ ಕುಸಿದಿದೆ. ಲೋಕೋಪಯೋಗಿ ಇಲಾಖೆ ಮೂಲಕ ತಾತ್ಕಾಲಿಕ ದುರಸ್ತಿ ಕಾರ್ಯ ನಡೆಯುತ್ತಿದೆ. ಈ ರಸ್ತೆಯಲ್ಲಿ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಭಾರೀ ವಾಹನಗಳು ಪರ್ಯಾಯ ಮಾರ್ಗವಾಗಿ ಹೊದವಾಡ-ಬೋಳಿಬಾಣೆ ಮೂಲಕ ನಾಪೋಕ್ಲು ಹಾಗೂ ಮೂರ್ನಾಡು ಕಡೆಗಳಿಗೆ ಸಂಚರಿಸಬಹುದಾಗಿದೆ.

ರಸ್ತೆ ಕುಸಿದ ಸ್ಥಳಕ್ಕೆ ಶಾಸಕ ಕೆ.ಜಿ.ಬೋಪಯ್ಯ, ತಹಶೀಲ್ದಾರ್ ಪಿ.ಎಸ್.ಮಹೇಶ್ ಹಾಗೂ ಲೋಕೋಪಯೋಗಿ ಇಂಜಿನಿಯರ್‌ಗಳು ಭೇಟಿ ನೀಡಿ ಪರಿಶೀಲಿಸಿದರು.

ಕುಟುಂಬಗಳ ಸ್ಥಳಾಂತರ: ವೀರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ತೋರ ಗ್ರಾಮದ 15 ಕುಟುಂಬಗಳ 41 ಸದಸ್ಯರನ್ನು ತೋಮರ ಶಾಲೆಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 2019ರಲ್ಲಿ ತೋರ ಗ್ರಾಮದಲ್ಲಿ ಗುಡ್ಡ ಕುಸಿದು ಜೀವಹಾನಿ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಸಕ್ತ ಭಾರೀ ಮಳೆಯಾಗುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ.

ಮನೆ ಕುಸಿತ: ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಚಂದಮಕ್ಕಿ ಗ್ರಾಮದ ಲಕ್ಷಣ್ ಹಾಗೂ ಮಾಲಂಬಿ ಕೂಡು ರಸ್ತೆಯ ಲಕ್ಷಮ್ಮ ಮುತ್ತಣ್ಣ ಎಂಬವರ ಮನೆ ಕುಸಿದು ಬಿದ್ದ ಘಟನೆ ನಡೆದಿದ್ದು, ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಮದೆ ಗ್ರಾ.ಪಂ. ವ್ಯಾಪ್ತಿಯಲ್ಲೂ ಮನೆಗಳಿಗೆ ಹಾನಿಯಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...