ಕಲಬುರಗಿ-ಬೀದರ ಜಿಲ್ಲೆಗಳಲ್ಲಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ 3000 ಕೋಟಿ ರೂ. -ಬಿ.ಎಸ್.ಯಡಿಯೂರಪ್ಪ

Source: SO News | By Laxmi Tanaya | Published on 17th September 2020, 7:17 PM | State News | Don't Miss |

ಕಲಬುರಗಿ :  ಕಲಬುರಗಿ ಮತ್ತು ಬೀದರ ಜಿಲ್ಲೆಗಳಲ್ಲಿ 3000 ಕೋಟಿ ರೂ. ಗಳ ವೆಚ್ಚದಲ್ಲಿ ಕೃಷಿ ಮತ್ತು ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆಯ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದ್ದು, ಅನುಷ್ಠಾನಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

ಅವರು ಗುರುವಾರ ಕಲಬುರಗಿ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿಯಿಂದ ಆಯೋಜಿಸಿದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿ ವಿವಿಧ ತುಕಡಿಗಳ ಪರಿವೀಕ್ಷಣೆ ಕೈಗೊಂಡು ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

 ಬೀದರ್ ಮತ್ತು ಕಲಬುರಗಿ ಜಿಲ್ಲೆಯ ರೈತರ ಲಕ್ಷಾಂತರ ಎಕರೆ ಭೂಮಿಗೆ ನೀರಿನ ಪೂರೈಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿ ರಾಜ್ಯ ಸರ್ಕಾರ ಕಟಿಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ಸುಮಾರು 1115.32 ಕೋಟಿ ರೂ. ಗಳ ಬೃಹತ್ ಮೊತ್ತದ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಾಗಿದೆ. “ಕಲ್ಯಾಣ ಕರ್ನಾಟಕ” ಪ್ರಾಂತ್ಯದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ  ಪ್ರಮುಖ ಗುರಿಗಳಲ್ಲಿ ಒಂದಾಗಿದೆ ಎಂದರು.

ದೇಶಕ್ಕೆ ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಸಿಕ್ಕಿದ್ದರು, ಕಲ್ಯಾಣ ಕರ್ನಾಟಕ ಪ್ರದೇಶ ಮಾತ್ರ ಸ್ವಾತಂತ್ರ್ಯದಿಂದ ಮರೀಚಿಕೆಯಾಗಿತ್ತು. ಸರ್ದಾರ ವಲ್ಲಭಭಾಯಿ ಪಟೇಲರ ಅಚಲ ನಿರ್ಧಾರದಿಂದಾಗಿ ಹೈದರಾಬಾದ ಕರ್ನಾಟಕ ಪ್ರದೇಶವು 1948ರ ಸೆಪ್ಟೆಂಬರ್ 17 ರಂದು ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನವಾಯಿತು. ನಿಜಾಮರ ಹಿಡಿತದಿಂದ ಈ ಪ್ರದೇಶವನ್ನು ಮುಕ್ತಗೊಳಿಸಲು ಬಹುದೊಡ್ಡ ಹೋರಾಟವೇ ನಡೆಯಿತು. ಆ ಹೋರಾಟದಲ್ಲಿ ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸಿ ಗೌರವ ಸಮರ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೆ ಕಳೆದ ವರ್ಷ ಇದೇ ದಿನ ಹೈದರಬಾದ್-ಕರ್ನಾಟಕ ಪ್ರದೇಶವನ್ನು “ಕಲ್ಯಾಣ ಕರ್ನಾಟಕ” ಎಂದು ಮರು ನಾಮಕರಣ ಮಾಡಿ ಇಲ್ಲಿನ ಬಹುಜನರ ಒತ್ತಾಸೆಯನ್ನು ಈಡೇರಿಸಲಾಗಿದೆ. ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪನೆಗೊಂಡಿದೆ. ಇದಲ್ಲದೆ ಪ್ರದೇಶದ ವ್ಯಾಪ್ತಿಯಲ್ಲಿ ಕೃಷಿ, ಶಿಕ್ಷಣ, ಸಾಹಿತ್ಯ, ಸ್ವಯಂ ಉದ್ಯೋಗ, ಆರೋಗ್ಯ, ಯುವಜನ ಮತ್ತು ಮಹಿಳಾ ಸಬಲೀಕರಣ, ಗ್ರಾಮ ಸಬಲೀಕರಣ ಹೀಗೆ ನಾನಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲೆಂದೇ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಕಚೇರಿ ಸ್ಥಾಪಿಸಿದ್ದು, ಸಂಘದ ಚಟುವಟಿಕೆ ತೀವ್ರಗೊಳಿಸಲು 300 ಕೋಟಿ ರೂ. ಅನುದಾನ ಬಿಡುಗಡೆಗೆ ಅನುಮೋದನೆ ನೀಡಿ ಈಗಾಗಲೆ 100 ಕೋಟಿ ರೂ. ಸಂಘಕ್ಕೆ ಬಿಡುಗಡೆ ಮಾಡಿದೆ ಎಂದರು.

ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಮಾಜಿ ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ ಇವರು ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಕ್ರಾಂತಿ ನಿಶ್ಚಿತ ಎಂಬುದು ನನ್ನ ಅಚಲ ನಂಬಿಕೆಯಾಗಿದೆ ಎಂದರು.

ಕೊಪ್ಪಳ ಜಿಲ್ಲೆಯಲ್ಲಿ ಚೀನಾ ದೇಶದ ಮಾದರಿಯಲ್ಲಿ ವಿಶ್ವಮಟ್ಟದ ಗೊಂಬೆ ತಯಾರಿಕಾ ಸಾಮರ್ಥ್ಯವುಳ್ಳ ಕೈಗಾರಿಕೆಗಳನ್ನು ಆಕರ್ಷಿಸಲು ‘ಗೊಂಬೆ ತಯಾರಿಕಾ ಕ್ಲಸ್ಟರ್’ನ್ನು ಸ್ಥಾಪಿಸಲಾಗುತ್ತಿದೆ. ಕೊಪ್ಪಳದಲ್ಲಿ 400 ಎಕರೆ ಪ್ರದೇಶದಲ್ಲಿ ಗೊಂಬೆ ತಯಾರಿಕಾ ವಿಶೇಷ ಆರ್ಥಿಕ ವಲಯ ಮತ್ತು ದೇಶಿಯ ಉತ್ಪಾದನಾ ವಲಯ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ 1500 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಮುಂದಿನ  3 ರಿಂದ 5 ವರ್ಷಗಳಲ್ಲಿ  20,000 ಜನರಿಗೆ ಉದ್ಯೋಗ ಕಲ್ಪಿಸಲಿದೆ ಎಂದರು.
ರಾಯಚೂರು ಜಿಲ್ಲೆಯ ಗೋಲಪಲ್ಲಿಯಲ್ಲಿ 1,200 ಮೆಗಾ ವ್ಯಾಟ್ ಸಾಮಥ್ರ್ಯದ 10,000 ಕೋಟಿ ರೂ.ಗಳ ವೆಚ್ಚದಲ್ಲಿ ಜಲ ವಿದ್ಯುತ್ ಯೋಜನೆಯು ಪರಿಶೀಲನಾ ಹಂತದಲ್ಲಿದ್ದು, ನೆರೆ ರಾಜ್ಯದ ಜೊತೆ ಮಾತುಕತೆ ನಡೆದಿದೆ ಎಂದು ಸಿ.ಎಂ. ಬಿ.ಎಸ್.ಯಡಿಯೂರಪ್ಪ ತಿಳಿಸಿದರು. 

ಲಕ್ಷಾಂತರ ಜನರ ಹೃದಯದಲ್ಲಿ ಬದುಕಿನ ಸೆಲೆ ಚಿಮ್ಮಿಸುವ ಕೆಲಸ ಮಾಡುತ್ತಿರುವ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖೆಯ 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸಂಕೀರ್ಣ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ಮಾಡಲಾಗಿದೆ. 7.15 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಈ ಆಸ್ಪತ್ರೆ ನಿರ್ಮಾಣಕ್ಕೆ 150 ಕೋಟಿ ರೂ. ವ್ಯಯ ಮಾಡಲಾಗುತ್ತಿದೆ. ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತವಾದ ಆಸ್ಪತ್ರೆ ಇದಾಗಲಿದ್ದು, ಕಲಬುರಗಿ ಭಾಗದ ಜನರಿಗೆ ಬಹಳ ಉಪಯುಕ್ತವಾಗಲಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಲು ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಲು ಬೆಂಗಳೂರಿನ ರೂಪೇನ ಅಗ್ರಹಾರದಲ್ಲಿ 1 ಎಕರೆ ಪ್ರದೇಶದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಲು ಉದ್ದೇಶಿಸಿ ಇಂದು ನಿವೇಶನ ಹಂಚಿಕೆ ಪತ್ರವನ್ನು ಕೆ.ಕೆ.ಆರ್.ಡಿ.ಬಿ. ಮಂಡಳಿಗೆ ವಿತರಿಸಿದೆ. ಮುಂದಿನ ಒಂದು ವರ್ಷದಲ್ಲಿ ಕಟ್ಟಡವನ್ನು ಮಂಡಳಿಯಿಂದ ಪೂರ್ಣಗೊಳಿಸಲಾಗುವುದು ಎಂದು ಸಿಎಂ ತಿಳಿಸಿದರು.

ಬಲ್ಕ್ ಡ್ರಗ್ ಪಾರ್ಕ್ ಸ್ಥಾಪನೆಗೆ ಪ್ರಸ್ತಾವನೆ: ಭಾರತ ಸರ್ಕಾರದ ‘ಬಲ್ಕ್ ಡ್ರಗ್ ಪಾರ್ಕ್ ಉತ್ತೇಜನ’ ಯೋಜನೆಯಡಿ ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದ 1510 ಎಕರೆ ಪ್ರದೇಶದಲ್ಲಿ ಬಲ್ಕ್ ಡ್ರಗ್ ಪಾರ್ಕ್‍ನ್ನು ಸ್ಥಾಪಿಸುವ ಕುರಿತು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಈ ಯೋಜನೆಯ ಅಭಿವೃದ್ಧಿ ವೆಚ್ಚವು ರೂ.1446 ಕೋಟಿ ಅಂದಾಜಿಸಲಾಗಿದ್ದು, ಅದರಲ್ಲಿ ಭಾರತ ಸರ್ಕಾರದ ಪಾಲು ರೂ.1000 ಕೋಟಿ ಸಿಗುವ ನಿರೀಕ್ಷೆ ಇದೆ ಎಂದರು.
4 ತಿಂಗಳಲ್ಲಿ ಅನುಭವ ಮಂಟಪ ಕಾರ್ಯಾರಂಭ: ಮುಂಬರುವ ನಾಲ್ಕು ತಿಂಗಳಲ್ಲಿ ಬಸವ ಕಲ್ಯಾಣ ಪ್ರಾಧಿಕಾರದ ಆಶ್ರಯದಲ್ಲಿ, ಎಲ್ಲ ಕಾನೂನಿನ ಪ್ರಕ್ರಿಯೆ ಪೂರ್ಣಗೊಳಿಸಿ, ಅನುಭವ ಮಂಟಪ ಕಾರ್ಯಾರಂಭ ಮಾಡಲಾಗುವುದು. 

ಕೈಪಿಡಿ ಬಿಡುಗಡೆ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಪ್ರದೇಶದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯುಳ್ಳ ಕೈಪಿಡಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡುಗಡೆ ಮಾಡಿದರು. 

1115.32 ಕೋಟಿ ರೂ.ಗಳ ಕಾಮಗಾರಿಗೆ ಚಾಲನೆ: ಜಯದೇವ ಹೃದ್ರೋಗ ಸಂಸ್ಥೆಯ ಕಲಬುರಗಿ ಶಾಖೆಯ ನೂತನ ಕಟ್ಟಡ, ಕಲಬುರಗಿ ನಗರಕ್ಕೆ 24*7 ಕುಡಿಯುವ ನೀರು ಸರಬರಾಜು ಕಾಮಗಾರಿ, ಕಲಬುರಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಏತ ನೀರಾವರಿ ಯೋಜನೆ ಅನುಷ್ಟಾನ, ಶ್ರೀ ಶರಣಬಸವೇಶ್ವರ ಕೆರೆ ಸಮಗ್ರ ಅಭಿವೃದ್ಧಿ ಕಾಮಗಾರಿ, ನೂತನ ಪೊಲೀಸ್ ಆಯುಕ್ತಾಲಯ ಕಟ್ಟಡ ಕಾಮಗಾರಿ, ರಸ್ತೆ ಸುಧಾರಣೆ, ಸಿಸಿ. ರಸ್ತೆ ಹೀಗೆ ವಿವಿಧ ಇಲಾಖೆಗಳ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಒಟ್ಟು 1115.32 ಕೋಟಿ ರೂ. ಬೃಹತ್ ಮೊತ್ತದ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೆರವೇರಿಸಿದರು. 

ರಾಜ್ಯದ ಉಪಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ, ಲೋಕೋಪಯೋಗಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಮಾತನಾಡಿ ಅತಿ ಹೆಚ್ಚು ಬಡವರು, ಗುಳೆ ಹೋಗುವವರು ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚಾಗಿದ್ದಾರೆ. ಹೀಗಾಗಿ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯಿಂದ ಈ ಭಾಗದಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದು, ಕೆಲವೊಂದು ಪೂರ್ಣಗೊಂಡಿವೆ. ಅವುಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಇಂದು ಮುಖ್ಯಮಂತ್ರಿ ನೆರವೇರಿಸಿದ್ದಾರೆ. ದೇಶದಲ್ಲಿ ಮಾದರಿಯಾಗಿ ಎಸ್.ಸಿ.,ಎಸ್.ಟಿ. ಜನಾಂಗದ ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದೆ. ರಾಜ್ಯದಲ್ಲಿ 824 ವಸತಿ ಶಾಲೆ, 3009 ವಸತಿ ನಿಲಯಗಳಿದ್ದು, ಸುಮಾರು 4 ಲಕ್ಷಕ್ಕಿಂತ ಹೆಚ್ಚಿನ ಮಕ್ಕಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ವೆಂಕಟರಾವ ಅರ್ಜುನರಾವ್ ಶಿಂಧೆ, ಶಿವಲಿಂಗಪ್ಪ ಬಸಲಿಂಗಪ್ಪ ಪಾಟೀಲ್, ಭೀಮರಾವ ರೇವಣಸಿದ್ದಪ್ಪ ಕೊಟ್ಟರಗಿ, ವಿಜಯಕುಮಾರ ಪ್ರಭಾಕರ್ ತಡಕಲ್ ಹಾಗೂ ಶಂಕರೆಪ್ಪ ರಾಮಶೆಟ್ಟಪ್ಪ ಹುಗ್ಗಿ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.  

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ ಸಿಂಗ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ. ಪಾಟೀಲ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಐ.ಜಿ.ಪಿ. ಮನೀಷ್ ಖರ್ಬಿಕರ್, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಕಲಬುರಗಿ ನಗರ ಪೊಲೀಸ್ ಆಯುಕ್ತ ಸತೀಷ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ ಪಾಂಡ್ವೆ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಐ.ಎ.ಎಸ್.ಪ್ರೋಬೇಷನರ್ ಅಧಿಕಾರಿ ಆಕಾಶ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು. ಕಲ್ಯಾಣ ಕರ್ನಾಟಕ ಪ್ರದೇ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ವಂದಿಸಿದರು.

ಸರ್ದಾರ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮಾಲಾರ್ಪಣೆ:-

ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಲಬುರಗಿ ನಗರದ ಎಸ್.ವಿ.ಪಿ. ವೃತ್ತದಲ್ಲಿರುವ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಮುಖ್ಯಮಂತ್ರಿಗಳಿಗೆ ಸಂಸದರು, ಶಾಸಕರು ಸಾಥ್ ನೀಡಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...