ಶಿಶು ಪಾಲನಾ ಕೇಂದ್ರ ಹಾಗೂ ಮಹಿಳೆಯರ ವಿಶ್ರಾಂತಿ ಕೊಠಡಿ ಉದ್ಘಾಟನೆ.‌ ಸರಕಾರಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತರ ಕಾರ್ಯ ಶ್ಲಾಘನೀಯ: ಡಿಸಿ ಮುಲೈ ಮುಗಿಲನ್.

Source: SO News | By Laxmi Tanaya | Published on 2nd September 2021, 10:10 PM | Coastal News | Don't Miss |

ಕಾರವಾರ : ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪಾತ್ರ ಮಹತ್ವದ್ದಾಗಿದ್ದು, ಸರ್ಕಾರದ ಪ್ರತಿಯೊಂದು ಯೋಜನೆಯನ್ನ ಗ್ರಾಮೀಣ ಮಟ್ಟದಲ್ಲಿ ಜನರಿಗೆ  ತಲುಪಿಸಲು ನಿರಂತರವಾಗಿ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ. ಪಿ. ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಯುಷ್ ಇಲಾಖೆಯ ಜಂಟಿ ಆಶ್ರಯದಲ್ಲಿ ಗುರುವಾರ ಜಿಲ್ಲಾ ಪಂಚಾಯತ್‍ನ ಆವರಣದಲ್ಲಿ ಆಯೋಜಿಸಿದ್ದ "ಶಿಶು ಪಾಲನಾ ಕೇಂದ್ರ ಹಾಗೂ ಮಹಿಳೆಯರ ವಿಶ್ರಾಂತಿ ಕೊಠಡಿ ಮತ್ತು ಪೌಷ್ಟಿಕ ಆಹಾರ ಹಾಗೂ ಮಾತೃವಂದನಾ ಸಪ್ತಾಹ" ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸದೃಢ ಭಾರತದ ನಿರ್ಮಾಣಕ್ಕೆ ಪೌಷ್ಟಿಕಯುಕ್ತ ಆಹಾರ ಹಾಗೂ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತ ಮಗುವಿನ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು, ಗರ್ಭಿಣಿಯರು, ಬಾಣಂತಿಯರ ಶ್ರೇಯೋಭಿವೃದ್ದಿಗಾಗಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದಲ್ಲದೇ ಪ್ರೋತ್ಸಾಹ ಧನವನ್ನೂ ನೀಡುತ್ತಿದ್ದು, ಅಂಗನವಾಡಿ ಕಾರ್ಯಕರ್ತರ ಮೂಲಕ ಸರಕಾರದ ಯೋಜನೆಯನ್ನ ಸಕಾರಗೊಳಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ ಅವರ ತಂಡ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ತಮ್ಮ ಕೈಕೆಳಗೆ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿ ಹಾಗೂ ಸಿಬ್ಬಂದಿಯ ಮಾನಸಿಕ ಒತ್ತಡದಂತ ಸಮಸ್ಯೆಗಳನ್ನ ಮನಗಂಡು ಜಿಲ್ಲಾ ಪಂಚಾಯತ್ ಆವರಣದಲ್ಲಿ ಸುಂದರವಾದ ಸುಸಜ್ಜಿತ ಮಾದರಿ ಶಿಶು ಪಾಲನಾ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿಯನ್ನು ನಿರ್ಮಿಸಿದ್ದಾರೆ. ಈ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಅಗತ್ಯಕ್ಕೆ ಅನುಗುಣವಾಗಿ ಶಿಶು ಪಾಲನಾ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಮಾತನಾಡಿ,  ಕಚೇರಿಗಳಲ್ಲಿ ಮಹಿಳಾ ಸಿಬ್ಬಂದಿ ಮನೆ, ಮಕ್ಕಳು, ಅಡುಗೆ ಸೇರಿದಂತೆ ಸಾಕಷ್ಟು ಒತ್ತಡಗಳ ಮಧ್ಯೆ ಕಾರ್ಯ ನಿರ್ವಹಿಸುತ್ತಾರೆ.  ಹೀಗಾಗಿ ಮಹಿಳಾ ಅಧಿಕಾರಿ ಹಾಗೂ ಸಿಬ್ಬಂದಿಯ ಮಾನಸಿಕ ಒತ್ತಡಗಳ ನಿವಾರಣೆಗಾಗಿ ಶಿಶು ಪಾಲನಾ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಿಸಲಾಗಿದ್ದು, ಪ್ರತಿಯೊಬ್ಬ ಸಿಬ್ಬಂದಿ  ಇದರ ಸದುಪಯೋಗ ಪಡೆಯಬೇಕು ಎಂದರು.

ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯ ಮತ್ತು ಪೌಷ್ಟಿಕ ಆಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ 15ನೇ ಹಣಕಾಸಿನ ಅನಿರ್ಬಂಧಿತ ಅನುದಾನದಡಿ ಜಿಲ್ಲಾ, ತಾಲೂಕಾ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿಶೇಷವಾಗಿ ಶೇ. 45-50ರಷ್ಟು ಹಣವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯಗಳಿಗೆ ಮೀಸಲಿರಿಸಿದೆ. ಜೊತೆಗೆ ಜಿಲ್ಲೆಯ ಎಲ್ಲ ಅಂಗನವಾಡಿಗಳನ್ನು ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ಅಂಗನವಾಡಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಪಟ್ಟಿ ಮಾಡಿಕೊಂಡಿದ್ದು, ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ, ವಿದ್ಯುತ್ ಅಳವಡಿಕೆ  ಹಾಗೂ ಶೌಚಾಲಯ ನಿರ್ಮಾಣದ ಸಮಸ್ಯೆಯನ್ನ ಸಂಪೂರ್ಣವಾಗಿ ಹೋಗಲಾಡಿಸಲಾಗುವುದು. ಸದ್ಯಕ್ಕೆ ಜಿಲ್ಲೆಯಲ್ಲಿ 20 ಅಂಗನವಾಡಿ ಕೇಂದ್ರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಬೇರೆ ಕಡೆಗಳಿಂದ ವಿನ್ಯಾಸಕಾರರನ್ನು ಕರೆಸಿ ಆ ಎಲ್ಲ ಅಂಗನವಾಡಿಗಳನ್ನು ಮಾದರಿ ಕೇಂದ್ರಗಳನ್ನಾಗಿಸಲು ಶ್ರಮಿಸಲಾಗುತ್ತಿದೆ ಎಂದರು.

ಪೌಷ್ಟಿಕ ಆಹಾರ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯಲ್ಲಿ ಸ್ಯಾಮ್ ಮತ್ತು ಮ್ಯಾಮ್ ಮಕ್ಕಳಿಗೆ ಮೊದಲ ಹಂತದ ಆರೋಗ್ಯ ತಪಾಸಣೆ ಮತ್ತು ಲಸಿಕೆ ವಿತರಣೆ ಮಾಡಲಾಗಿದೆ. ಸೆಪ್ಟೆಂಬರ್ ಎರಡನೇ ವಾರದಿಂದ ಎರಡನೇ ಹಂತವನ್ನು ಪ್ರಾರಂಭಿಸಲಾಗುತ್ತಿದೆ. ಈ ಅಭಿಯಾನದಡಿ ಸ್ಯಾಮ್ ಮತ್ತು ಮ್ಯಾಮ್ ಮಕ್ಕಳ ಹಾಜರಾತಿ ಮೌಲ್ಯ ಮಾಪನ ಮಾಡಿ   ಒಂದು ವರದಿ ಸಿದ್ದಪಡಿಸಲಾಗುತ್ತಿದೆ. ಈ ವರದಿಯ ಆಧಾರದಡಿ ಮುಂದಿನ ದಿನಗಳಲ್ಲಿ ಸ್ಯಾಮ್ ಮತ್ತು ಮ್ಯಾಮ್ ಮಕ್ಕಳಿಗೆ ಅಂಗನವಾಡಿ ಕೇಂದ್ರದಲ್ಲಿಯೇ ಪೌಷ್ಟಿಕ ಆಹಾರ ವಿರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಇದಕ್ಕೆ ಪೂರಕವಾಗಿ ಶಿರಸಿಯಲ್ಲಿ ಒಂದು ಪ್ರಯೋಗ ನಡೆಸಲಾಗಿದ್ದು, ಜಿಲ್ಲೆಯ ಎಲ್ಲ ಅಂಗನವಾಡಿಗಳು ಅದನ್ನು ಮಾದರಿಯನ್ನಾಗಿ ಪರಿಗಣಿಸುವಂತೆ ವೇಳಾಪಟ್ಟಿಯನ್ನು ತಯಾರಿಸಲಾಗುತ್ತಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಸಿ.ಕೆ. ಶ್ಯಾಮಲಾ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಸಹಾಯ ಧನಕ್ಕಾಗಿ ಜಿಲ್ಲೆಯಲ್ಲಿ ಈವರೆಗೆ 36,589 ಫಲಾನುಭವಿಗಳು ಹೆಸರು ನೊಂದಾಯಿಸಿದ್ದು, 1.02.022 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 88,717 ಫಲಾನುಭವಿಗಳಿಗೆ 14,63,71,000 ರೂ ಹಣವನ್ನು ಪಾವತಿಸಲಾಗಿದ್ದು, 11,914 ಅರ್ಜಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆಯುಷ್ ಇಲಾಖೆಯಿಂದ ಪೌಷ್ಟಿಕ ಆಹಾರ ಪ್ರದರ್ಶನ, ಆಯುರ್ವೇದ ಔಷಧ ವಿತರಣೆ ಮತ್ತು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ. ಲಲಿತಾ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಜಿ. ಪದ್ಮಾವತಿ, ಪಂಚಾಯತ್ ಇಂಜನಿಯರ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಸಿ.ಕೆ. ರವಿಕುಮಾರ ಸೇರಿದಂತೆ ಜಿಲ್ಲಾ ಪಂಚಾಯತ್‍ನ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...