ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಅಮೃತ ಸ್ವಾತಂತ್ಯೋತ್ಸವ ಆಚರಣೆ; ಹೊಸ ಯೋಜನೆಗಳನು ಘೋಷಿಸಿದ ಬೊಮ್ಮಾಯಿ

Source: Vb | By I.G. Bhatkali | Published on 16th August 2022, 11:34 AM | State News |

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹುತಾತ್ಮ ಯೋಧರ ಕುಟುಂಬಗಳಿಗೆ ಸರಕಾರಿ ನೌಕರಿ, 4 ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರ ಆರಂಭ ಹಾಗೂ ಕುಶಲಕರ್ಮಿಗಳಿಗೆ ಸಹಾಯಧನ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಘೋಷಿಸಿದ್ದಾರೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ನೌಕರಿ ನೀಡಲಾಗುವುದು. ಹಾಗೆಯೇ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರವನ್ನು ವಿಳಂಬ ಮಾಡದೇ ನೀಡಲಾಗುವುದು ಎಂದು ತಿಳಿಸಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆಗಳನ್ನು ನೀಡಲು ಸರಕಾರ ತೀರ್ಮಾನಿಸಿದೆ. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿ, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ.ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಎಲ್ಲ ಸರಕಾರಿ ಶಾಲೆ, ಕಾಲೇಜುಗಳಲ್ಲಿ ಶೇ.100 ರಷ್ಟು ಶೌಚಾಲಯಗಳ ನಿರ್ಮಾಣವನ್ನು 250 ಕೋಟಿ ರೂ. ವೆಚ್ಚದಲ್ಲಿ ಮಾಡಲಾಗುವುದು. ಆ ಮೂಲಕ ಶಾಲೆ, ಕಾಲೇಜುಗಳಲ್ಲಿ ಸ್ವಚ್ಛ-ಆರೋಗ್ಯಕರ ವಾತಾವರಣ ನಿರ್ಮಿಸಲಾಗುವುದು. ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು. ರಾಜ್ಯದಲ್ಲಿ ಹೊಸದಾಗಿ 4,050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ದೇಶಕ್ಕಾಗಿ ಹಲವರು ಪ್ರಾಣ ತ್ಯಾಗ ಮಾಡಿದ್ದಾರೆ. 1857ರ ದಂಗೆಗೂ ಮುನ್ನ 1824ರಲ್ಲೇ ಕನ್ನಡತಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಮೊದಲ ರಾಣಿ ಎನಿಸಿಕೊಂಡಿದ್ದಾಳೆ. ಈ ಹೋರಾಟದಲ್ಲಿ ಸಂಗೊಳ್ಳಿ ರಾಯಣ್ಣರನ್ನು ಮರೆಯುವಂತಿಲ್ಲ. ಇಂದಿನ ಸ್ವಾತಂತ್ರ್ಯ ದಿನೋತ್ಸವಕ್ಕೆ ಹಾಗೂ ಗಣತಂತ್ರ ವ್ಯವಸ್ಥೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕ‌ರವರ ಕೊಡುಗೆಯನ್ನು ಮರೆಯುವಂತಿಲ್ಲ. ಅವರು ರಚಿಸಿದ ಸಂವಿಧಾನದಿಂದ ನಾವು ಸ್ವಾತಂತ್ರೋತ್ಸವ ಆಚರಿಸಲು ಸಾಧ್ಯವಾಗಿದೆ. ಆದರೆ ಅವರ ಬಗ್ಗೆ ಮಾತನಾಡುವುದು ಕಡಿಮೆ ಯಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನ ಒಂದಾಗಬೇಕೆಂದಿದ್ದ ಅಬ್ದುಲ್ ಗಫಾರ್ ಖಾನ್‌ ರನ್ನು ನಾವು ಮರೆಯಬೇಕಾ ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ದೇಶದ ಮುನ್ನಡೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಒಬ್ಬ ಮನುಷ್ಯನಿಗೆ 75 ವರ್ಷ ತುಂಬಿದರೆ ಹಿರಿಯನಾಗಿರುತ್ತಾನೆ. ಆದರೆ ಒಂದು ದೇಶಕ್ಕೆ ಎಪ್ಪತ್ತೈದು ವರ್ಷಗಳು ಕಡಿಮೆಯೇ ಆಗಿರುತ್ತದೆ. ಆದರೆ ಅನುಭವ ಹೆಚ್ಚಾಗಿರುತ್ತದೆ. ಇಲ್ಲಿ ನಿಂತು ನಾವು ನಡೆದು ಬಂದ ದಾರಿಯನ್ನು ಅವಲೋಕಿಸುವುದರೊಂದಿಗೆ, ಮುಂದೆ ನಾವೇನು ಮಾಡಬೇಕು ಎಂಬುದನ್ನು ನಿರ್ಧರಿಸಲು ಇದು ಸಕಾಲ. ಹಿಂದಿನ ಎಪ್ಪತ್ತೈದು ವರ್ಷಗಳು ಮುಂದಿನ ಇಪ್ಪತ್ತೈದು ವರ್ಷಗಳಿಗೆ ಮಾರ್ಗಸೂಚಿ ಆಗಿ ರಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ 'ಮನ್-ಕಿ-ಬಾತ್' ಕಾರ್ಯಕ್ರಮದಲ್ಲಿ ಘೋಷಿಸಿದಂತೆ ಇಂದಿನಿಂದ ಅಮೃತ ಪರ್ವದ ಪ್ರಾರಂಭವಾಗಿದ್ದು, ಮುಂದಿನ 25 ವರ್ಷಗಳಲ್ಲಿ ನಮ್ಮ ದೇಶದ ಉಜ್ವಲ ಭವಿಷ್ಯಕ್ಕಾಗಿ ನಾವೆಲ್ಲರೂ ಕೈಜೋಡಿಸಿ ಕಾರ್ಯ ನಿರ್ವಹಿಸೋಣ ಎಂದು ಕರೆ ನೀಡಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...