ಸಿದ್ದರಾಮಯ್ಯಗೆ ಹೈಕಮಾಂಡ್ ಅಭಯ; ಷಡ್ಯಂತ್ರ ವಿರುದ್ದ ಹೋರಾಟ: ಸುರ್ಜೆವಾಲಾ

Source: Vb | By I.G. Bhatkali | Published on 24th August 2024, 7:31 AM | State News |

ಹೊಸದಿಲ್ಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕಾನೂನು ಕ್ರಮಕ್ಕೆ ರಾಜ್ಯಪಾಲ ಅನುಮತಿ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಅಭಯ ಹಸ್ತವನ್ನು ನೀಡಿದೆ.

ಶುಕ್ರವಾರ ಹೊಸದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ಸಚಿವರು, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಹೈಕಮಾಂಡ್ ನಾಯಕರ ಜೊತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲಾ, ಹೈಕಮಾಂಡ್ ನಾಯಕರ ಜೊತೆ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿನ ಪರಿಸ್ಥಿತಿ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಎಲ್ಲ ವಿವರಗಳನ್ನು ನಮ್ಮ ಗಮನಕ್ಕೆ ತಂದಿದ್ದಾರೆ ಎಂದು ಹೇಳಿದರು.

ಬಿಜೆಪಿ ಹಾಗೂ ಜೆಡಿಎಸ್‌ನವರು ಪಂಜರದ ಗಿಣಿಯಾಗಿರುವ ರಾಜ್ಯಪಾಲರನ್ನು ಬಳಸಿಕೊಂಡು ಚುನಾಯಿತ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಯಾವ ರೀತಿ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಪ್ರಧಾನಿ, ಕೇಂದ್ರ ಗೃಹ ಸಚಿವ ಹಾಗೂ ಇಡೀ ಬಿಜೆಪಿ ನಾಯಕತ್ವ ಕಾಣದ ಕೈಗಳಾಗಿ ರಾಜ್ಯಪಾಲರ ಹಿಂದೆ ನಿಂತುಕೊಂಡು ಯಾವ ರೀತಿ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ವಿವರಣೆ ನೀಡಿದ್ದಾರೆ ಎಂದು ಸುರ್ಜೆವಾಲಾ ತಿಳಿಸಿದರು.

ರಾಜ್ಯದ ಸುಮಾರು 4 ಕೋಟಿ ಕನ್ನಡಿಗ ಸಹೋದರ, ಸಹೋದರಿಯರಿಗೆ ಪ್ರಯೋಜನ ಕಲ್ಪಿಸುತ್ತಿರುವ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳನ್ನು ನಿಲ್ಲಿಸಲು ಕಳೆದ ಒಂದು ವರ್ಷದಿಂದ ಬಿಜೆಪಿ ಹಾಗೂ ಜೆಡಿಎಸ್‌ನವರು ಪ್ರಯತ್ನ ಪಡುತ್ತಿದ್ದಾರೆ. ಪ್ರತೀ ವರ್ಷ ನಾವು ರಾಜ್ಯದ ಜನರಿಗೆ 53 ಸಾವಿರ ಕೋಟಿ ರೂ.ಗಳನ್ನು ಈ ಗ್ಯಾರಂಟಿಗಳ ಮೂಲಕ ಪಾರದರ್ಶಕವಾಗಿ ತಲುಪಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಎಸ್ಸಿ, ಎಸ್ಟಿ, ಹಿಂದುಳಿದವರು, ಅಲ್ಪ ಸಂಖ್ಯಾತರು ಹಾಗೂ ಸಾಮಾನ್ಯ ವರ್ಗದಲ್ಲಿನ ಬಡವರಿಗೆ ಅನುಕೂಲ ಕಲ್ಪಿಸುತ್ತಿರುವ ಕಾಂಗ್ರೆಸ್ ಗ್ಯಾರಂಟಿಗಳಿಂದ ಬಿಜೆಪಿ ಹಾಗೂ ಜೆಡಿಎಸ್‌ನವರು ಭಯ ಭೀತರಾಗಿದ್ದಾರೆ. ಇದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕಾಂಗ್ರೆಸ್ ಸರಕಾರದ ವಿರುದ್ಧದ ದಾಳಿಯಲ್ಲ, ರಾಜ್ಯದ ಜನತೆಯ ಮೇಲೆ ನಡೆಸುತ್ತಿರುವ ದಾಳಿಯಾಗಿದೆ ಎಂದು ಸುರ್ಜೆವಾಲಾ ಕಿಡಿಕಾರಿದರು.

ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಸೇರಿದಂತೆ ಹಲವರು ಬಿಜೆಪಿ ನಾಯಕರ ವಿರುದ್ದ ಕಾನೂನು ಕ್ರಮಕ್ಕೆ ಅನುಮತಿ ನೀಡುವಂತೆ ತನಿಖಾಧಿಕಾರಿಗಳು ಕೋರಿದ್ದರೂ ಯಾವ ಕಾರಣಕ್ಕೆ ರಾಜ್ಯಪಾಲರು ಈವರೆಗೆ ಅನುಮತಿ ನೀಡಿಲ್ಲ ಎಂಬ ನಮ್ಮ ಪ್ರಶ್ನೆಗೆ ಅವರ ಬಳಿ ಉತ್ತರವಿಲ್ಲ. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ, ಶಾಸಕರು ಈ ವಿಚಾರದಲ್ಲಿ ಹೋರಾಟ ಮಾಡುತ್ತೇವೆ ಎಂದು ಸುರ್ಜೆವಾಲ ತಿಳಿಸಿದರು. ನಾವೆಲ್ಲ ಒಗ್ಗಟ್ಟಾಗಿ ಹೋರಾಡುತ್ತೇವೆ. ಈ ಹೋರಾಟದಲ್ಲಿ ಮುಖ್ಯಮಂತ್ರಿ ಜೊತೆ ನಾವು ನಿಂತಿದ್ದೇವೆ. ರಾಜ್ಯಪಾಲರು ನೀಡಿರುವ ಅನುಮತಿ ಸಂವಿಧಾನ ಬಾಹಿರ, ಕಾನೂನಿಗೆ ವಿರುದ್ಧವಾದದ್ದು. ಕಾನೂನು ಹೋರಾಟದಲ್ಲಿ ನಾವು ಗೆಲ್ಲುತ್ತೇವೆ. ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗೆ ದೂರು ನೀಡುವುದು ಸೇರಿದಂತೆ ಎಲ್ಲ ಆಯ್ಕೆಗಳು ನಮ್ಮ ಮುಂದೆ ಇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Read These Next

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...

ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಗಿಟ್ಟಿಸಿದ್ದ ಮುನಿರತ್ನ; ರಕ್ಷಣೆ ನೀಡಿದರೆ 'ಸಿಟ್' ಮುಂದೆ ದಾಖಲೆ ಬಿಡುಗಡೆ: ಸಂತ್ರಸ್ತೆ

ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿಸಿ, ಅವರನ್ನು ...

ಚಿಕ್ಕಮಗಳೂರು: ಓವರ್‌ಡೋಸ್ ಇಂಜೆಕ್ಷನ್‌ನಿಂದ ಏಳು ವರ್ಷದ ಬಾಲಕನ ದುರ್ಮರಣ; ಸಾರ್ವಜನಿಕರಿಂದ ಆಕ್ರೋಶ

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್‌ನ ...

ಚುನಾವಣಾ ಬಾಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಸುಲಿಗೆ ಆರೋಪ; ಕೇಂದ್ರ ಸಚಿವೆ ನಿರ್ಮಲಾ ವಿರುದ್ಧ ಎಫ್‌ಐಆರ್

ಚುನಾವಣಾ ಬಾಂಡ್ ಮೂಲಕ ಕಾರ್ಪೊರೇಟ್ ಕಂಪೆನಿಗಳಿಂದ ಸಾವಿರಾರು ಕೋಟಿ ರೂ. ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ...