ತಿಂಗಳ ಅಂತ್ಯದವರೆಗೆ ಮಾರ್ಗಸೂಚಿ ವಿಸರಣೆ; ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

Source: VB | By I.G. Bhatkali | Published on 12th January 2022, 10:45 PM | State News |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸುವ ಸಂಬಂಧ ಈಗಾಗಲೇ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಜನವರಿ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೋವಿಡ್ ಸೋಂಕಿತರಾಗಿರುವ ಬೊಮ್ಮಾಯಿ ತಮ್ಮ ನಿವಾಸದಿಂದ ಕೋವಿಡ್ ಸ್ಥಿತಿಗತಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಜೊತೆ ವರ್ಚುವಲ್ ಸಭೆ ನಡೆಸಿದರು.

ಶಾಲೆ ಮುಚ್ಚುವ ಅಧಿಕಾರ ಜಿಲ್ಲಾಧಿಕಾರಿಗೆ: ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಕರಣಗಳನ್ನು ಆಧರಿಸಿ ಬಿಇಒ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ತೀರ್ಮಾನಿಸಲಾಯಿತು.

ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚಿಸಲಾಯಿತು. ಕೋವಿಡ್ ಸೋಂಕಿತಮಕ್ಕಳ ಚಿಕಿತ್ಸೆಗೆ ಅಗತ್ಯವಿರುವಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಯಿತು.

ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಯಿತು.

ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್‌ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿ ಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸಬೇಕು. ಹೋಮ್ ಐಸೋಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಯಿತು.

ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರಾರಂಭಿಸುವಂತೆ ಸೂಚಿಸಿದ ಮುಖ್ಯಮಂತ್ರಿ, ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚಿಸಿದರು.

ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷವರೆಗೆ ಹೆಚ್ಚಿಸಬೇಕು. ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.

ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಹಿರಿಯ ಅಧಿಕಾರಿಗಳು ಹಾಗೂ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಗೃಹ ಸಚಿವ ಆರಗ ಜ್ಞಾನೇಂದ್ರ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ, ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...