ಬೆಂಗಳೂರು: ಭ್ರಷ್ಟಾಚಾರ ಆರೋಪ ಬಿಎಸ್‌ವೈ, ವಿಜಯೇಂದ್ರ, ಆಪ್ತರಿಗೆ ಹೈಕೋರ್ಟ್ ನೋಟಿಸ್

Source: VB | By S O News | Published on 4th August 2021, 2:35 PM | State News |

ಬೆಂಗಳೂರು: ಭ್ರಷ್ಟಾಚಾರ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಮತ್ತು ಆಪ್ತರ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಅರ್ಜಿ ಸಂಬಂಧ ಹೈಕೋರ್ಟ್‌ ಬಿಎಸ್‌ವೈ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಭ್ರಷ್ಟಾಚಾರ ಕುರಿತಂತೆ ತನಿಖೆ ಕೋರಿ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿರುವ ಜನಪ್ರತಿನಿಧಿಗಳ ವಿಚಾರಣಾ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೂರುದಾರ ಟಿ.ಜೆ. ಅಬ್ರಹಾಂ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಸುನೀಲ್ ದತ್ ಯಾದವ್ ಅವರಿದ್ದ ಪೀಠ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ, ಆಪ್ತರಾದ ಶಶಿಧರ್ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಎಸ್.ಟಿ.ಸೋಮಶೇಖರ್, ಐಎಎಸ್

ಅಧಿಕಾರಿ ಡಾ. ಜಿ.ಸಿ.ಪ್ರಕಾಶ್, ಕೆ. ರವಿ ಹಾಗೂ ವಿರೂಪಾಕ್ಷಪ್ಪ ಯಮಕನಮರಡಿ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಆಗಸ್ಟ್ ಎರಡನೇ ವಾರಕ್ಕೆ ಮುಂದೂಡಿತು.

ಪ್ರಕರಣವೇನು?: ಯಡಿಯೂರಪ್ಪ ನವರು ಮುಖ್ಯಮಂತ್ರಿ ಆಗಿದ್ದಾಗ ಅವರ ಪುತ್ರ ವಿಜಯೇಂದ್ರ ಹಾಗೂ ಇತರ ಆಪ್ತರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಿಎಂ ಕುಟುಂಬದವರು ನಕಲಿ ಕಂಪೆನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಸರಕಾರದ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಆರೋಪಿಸಿದ್ದರು. ಅಲ್ಲದೇ, ಇವರ ವಿರುದ್ಧ ತನಿಖೆ ನಡೆಸುವಂತೆ 2020ರ ನವೆಂಬರ್ 19ರಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದೂರು ನೀಡಿದ್ದರು. ಆದರೆ, ಎಸಿಬಿ ಅಧಿಕಾರಿಗಳು 2020ರ ಡಿಸೆಂಬರ್ 15ರಂದು ದೂರು ಕೈಬಿಟ್ಟಿದ್ದರು.

ಆ ಬಳಿಕ 2021ರ ಜೂನ್ 6ರಂದು ವಿಶೇಷ ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಿಸಿದ್ದ ಟಿ.ಜೆ. ಅಬ್ರಹಾಂ, ಮುಖ್ಯಮಂತ್ರಿ ಯಡಿಯೂರಪ್ಪ, ಅವರ ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ಆಪ್ತರಾದ ಶಶಿಧರ ಮರಡಿ, ವಿರೂಪಾಕ್ಷಪ್ಪ ಯಮಕನಮರಡಿ, ಸಂಜಯಶ್ರೀ, ಚಂದ್ರಕಾಂತ್ ರಾಮಲಿಂಗಂ, ಸಚಿವ ಎಸ್.ಟಿ. ಸೋಮಶೇಖರ್‌, ಐಎಎಸ್‌ ಅಧಿಕಾರಿ ಡಾ.ಜಿ.ಸಿ ಪ್ರಕಾಶ್, ಕ್ರೆಸೆಂಟ್ ಹೊಟೇಲ್ ಮಾಲಕ ಕೆ.ರವಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7, 8, 9, 10, 13 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 383, 384, 415, 418, 420 ಹಾಗೂ 120 ಬಿ ಅಡಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಕ್ತ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.

Read These Next

ತಂಬಾಕು ದುಷ್ಪರಿಣಾಮ ಮತ್ತು ಕೋಟ್ಪಾ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮ. ಮಕ್ಕಳನ್ನು ಸರಿದಾರಿಗೆ ತರುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ : ಎಸ್‍ಪಿ

ಶಿವಮೊಗ್ಗ : ಪ್ರಸ್ತುತ ದಿನಮಾನಗಳಲ್ಲಿ ಹದಿ ವಯಸ್ಸಿನ ಮಕ್ಕಳೇ ತಂಬಾಕು ಉತ್ಪನ್ನಗಳ ಚಟಕ್ಕೆ ಒಳಗಾಗುತ್ತಿದ್ದು, ಮಕ್ಕಳನ್ನು ...