2 ವಿಧದ ಬಿಪಿಎಲ್ ಕಾರ್ಡ್ ಜಾರಿಗೆ ಚಿಂತನೆ: ಮುನಿಯಪ್ಪ; ವೈದ್ಯಕೀಯ ಉದ್ದೇಶಕ್ಕೆ ಪ್ರತ್ಯೇಕ, ಸಿಎಂ ಜೊತೆ ಚರ್ಚಿಸಿ ನಿರ್ಧಾರ

Source: Vb | By Staff Correspondent | Published on 27th July 2023, 5:27 PM | State News |

ಬೆಂಗಳೂರು: ರಾಜ್ಯದಲ್ಲಿ ಎರಡು ವಿಧದ ಪಡಿತರ ಚೀಟಿಗಳನ್ನು ಜಾರಿಗೊಳಿಸುವ ಚಿಂತನೆ ಇದ್ದು, ಇದರ ಮೂಲಕ ವೈದ್ಯಕೀಯ ಸೌಲಭ್ಯ ಪಡೆದುಕೊಳ್ಳುವುದು ಸುಲಭವಾಗಲಿದೆ' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ

ಬುಧವಾರ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶದ ಮಾದರಿಯಲ್ಲಿ ರಾಜ್ಯದಲ್ಲಿ ಎರಡು ವಿಧದ ಪಡಿತರ ಚೀಟಿಗಳನ್ನು ಜಾರಿಗೊಳಿಸುವ ಚಿಂತನೆ ನಡೆದಿದೆ. ಈ ಮೂಲಕ ಒಂದು ಪಡಿತರ ಚೀಟಿ ವೈದ್ಯಕೀಯ ಉದ್ದೇಶಕ್ಕೆ ಸೀಮಿತವಾಗಲಿದೆ' ಎಂದು ಹೇಳಿದರು.

ಅಲ್ಲದೆ, ಬಿಪಿಎಲ್ ಪಡಿತರ ಚೀಟಿದಾರರಲ್ಲಿ ಕೆಲವರು ಆಹಾರ ಧಾನ್ಯ ಪಡೆಯುತ್ತಿಲ್ಲ. ವೈದ್ಯಕೀಯ ಸೇವೆಗಳಲ್ಲಿ ಶುಲ್ಕ ರಿಯಾಯಿತಿ ಪಡೆಯುವುದಕ್ಕೆ ಸೀಮಿತ ವಾಗಿ ಪಡಿತರ ಚೀಟಿ ಬಳಸುತ್ತಿದ್ದಾರೆ. ಜತೆಗೆ, ನೆರೆಯ ಆಂಧ್ರಪ್ರದೇಶದಲ್ಲಿ ಆಸಕ್ತರಿಗೆ ವೈದ್ಯಕೀಯ ಉದ್ದೇಶಕ್ಕೆ ಸೀಮಿತವಾಗಿ ಬಳಸಬಹುದಾದ ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗುತ್ತಿದೆ. ಇದೇ ಮಾದರಿಯನ್ನು ರಾಜ್ಯದಲ್ಲೂ ಅನುಸರಿಸುವ ಪ್ರಸ್ತಾವ ಇದೆ ಎಂದು ಅವರು ಮಾಹಿತಿ ನೀಡಿದರು

ಸದ್ಯ ರಾಜ್ಯ ವ್ಯಾಪಿ 1.28 ಕೋಟಿ ಬಿಪಿಎಲ್ ಪಡಿತರ ಚೀಟಿಗಳಿದ್ದು, ಈ ಪೈಕಿ 97.27 ಲಕ್ಷ ಪಡಿತರ ಚೀಟಿದಾರರ ಆಧಾರ್, ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಮೊಬೈಲ್‌ ಸಂಖ್ಯೆಗಳನ್ನು ಜೋಡಣೆ ಮಾಡಲಾಗಿದೆ. 30.90 ಲಕ್ಷ ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಈ ಮಾಹಿತಿ ಜೋಡಣೆಯಾಗಿಲ್ಲ. ಮೊದಲ ಹಂತದಲ್ಲಿ ಅಗತ್ಯ ಮಾಹಿತಿ ಜೋಡಣೆಯಾಗಿರುವ ಪಡಿತರ ಚೀಟಿದಾರರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಅಕ್ಕಿಯ ಬಾಬು ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸಚಿವರು ಉಲ್ಲೇಖಿಸಿದರು.

ಬಿಪಿಎಲ್ ಪಡಿತರ ಚೀಟಿ ಕೋರಿರುವ ಮೂರು ಲಕ್ಷ ಅರ್ಜಿಗಳು ಬಾಕಿ ಇವೆ. ಅವುಗಳನ್ನು ಶೀಘ್ರದಲ್ಲಿ ಪರಿಶೀಲಿಸಿ, ಅರ್ಹರಿಗೆ ಪಡಿತರ ಚೀಟಿ ವಿತರಿಸಲಾಗುವುದು ಎಂದು ಭರವಸೆ ನೀಡಿದ ಅವರು, ಈವರೆಗೆ 27 ಜಿಲ್ಲೆಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ 566 ಕೋಟಿ ಪಾವತಿಸಲಾಗಿದೆ. ಚಿಕ್ಕಬಳ್ಳಾಪುರ, ಶಿವಮೊಗ್ಗ, ಉಡುಪಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಾಕಿ ಇದ್ದು, ವಾರದೊಳಗೆ ಎಲ್ಲರ ಖಾತೆಗಳಿಗೂಹಣ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...