ಬೆಂಗಳೂರು: ಪ್ರಧಾನಿಯನ್ನು ಭೇಟಿಯಾದ ನೂತನ ಸಿಎಂ ಬೊಮ್ಮಾಯಿ; ಏಮ್ಸ್ ಮಂಜೂರಿಗೆ ಮನವಿ

Source: VB | By S O News | Published on 31st July 2021, 7:16 PM | National News | State News |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ  ಶುಕ್ರವಾರ ದಿಲ್ಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್‌ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು.

ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭ ತನ್ನನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದರು ಹಾಗೂ ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿಯವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸುವಂತೆ ಪ್ರಧಾನಿ ಸಲಹೆ ನೀಡಿದರು, ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಪ್ರಧಾನಮಂತ್ರಿ ಭರವಸೆ ನೀಡಿದರು.

ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಹೊಸದಾಗಿ ಸೃಜನೆಯಾದ ಸಹಕಾರ ಸಚಿವಾಲಯದ ಹೊಣೆ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ರಾಜ್ಯದ ಪ್ರವಾಹ ಪರಿಸ್ಥಿತಿ, ಕೋವಿಡ್-19 ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಮಾಹಿತಿ ನೀಡಿದರು. ಇದು ಪರೀಕ್ಷೆಯ ಸಮಯವೆಂದ ಗೃಹ ಸಚಿವರಿಗೆ ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವಂತೆ ಹಾಗೂ ಕೃಷ್ಣಾ ಮೇಲ್ದಂಡೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕುರಿತು ಚರ್ಚೆ ನಡೆಸಲಾಯಿತು.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಅನುರಾಗ್ ಠಾಕುರ್ ಮೊದಲಾದವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನೂತನ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಈ ಗಣ್ಯರು, ರಾಜ್ಯದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಮಧ್ಯಾಹ್ನ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಯವರು ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲು ಹಾಗೂ ಕೇಂದ್ರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಹಕಾರ ನೀಡುವಂತೆ ಕೋರಿದರು. ಈ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಂಸದರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ತಿಳಿಸಿದರು. ನಾಡಿನ ನೆಲ, ಜಲದ ರಕ್ಷಣೆಯಲ್ಲಿ ಸಂಸದರು ಸಹಕರಿಸುವಂತೆ ಮನವಿ ಮಾಡಿದರು.

ತಮ್ಮ ದಿಲ್ಲಿ ಭೇಟಿಯ ವಿವರಗಳನ್ನು ಮಾಧ್ಯಮದವರಿಗೆ ನೀಡಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಆರ್ಥಿಕ ಸುಸ್ಥಿರತೆ ಕಾಪಾಡುವುದು, ಪ್ರವಾಹ ಹಾಗೂ ಕೋವಿಡ್ ನಿಯಂತ್ರಣ ಆದ್ಯತೆಯ ವಿಷಯಗಳು ಎಂದು ತಿಳಿಸಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...