ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ಬರ ಎದುರಿಸಲು ಸಿದ್ಧರಾಗಿ: ಸಚಿವರಾದ ಬಂಡೆಪ್ಪ ಖಾಶೆಂಪೂರ

Source: so news | By MV Bhatkal | Published on 9th March 2019, 11:14 PM | State News | Don't Miss |

ಬೀದರ:ಇನ್ನು ಮೂರು ತಿಂಗಳು ಜಿಲ್ಲೆಯಲ್ಲಿ ಬರದ ಹಿನ್ನೆಲೆಯಲ್ಲಿ ನಾನಾ ಸವಾಲುಗಳು ಎದುರಾಗಲಿವೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ, ಜಾಗೃತರಾಗಿ ಕೆಲಸ ಮಾಡಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಂಡೆಪ್ಪ ಖಾಶೆಂಪೂರ ಅವರು ತಿಳಿಸಿದರು.
ಮಾ.7ರಂದು ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಬರ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ನರೇಗಾ ಯೋಜನೆ ಅನುಷ್ಠಾನ ಅಧಿಕಾರಿಗಳು ಸ್ಥಳದಲ್ಲಿದ್ದು ಜನತೆಗೆ ನಿರಂತರ ಸೇವೆ ನೀಡಬೇಕು. 
ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರು ಆಗಾಗ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಬೇಕು ಎಂದು ಅವರು ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜನರು ದೂರುವಂತಾಗಬಾರದು: ನಮ್ಮೂರಲ್ಲಿ ಕೆಲಸ ಇಲ್ಲವೆಂದು ಯಾವುದೇ ಗ್ರಾಮಸ್ಥರು ಜನಪ್ರತಿನಿಧಿಗಳ ಹತ್ತಿರ ಬಂದು ದೂರುವಂತಾಗಬಾರದು. ಕೆಲಸ ಕೇಳುವ ಪ್ರತಿಯೊಬ್ಬರಿಗೆ ಕೆಲಸ ಒದಗಿಸಬೇಕು. ಜನರು ಹೇಳುವ ಮೊದಲೇ ಅಧಿಕಾರಿಗಳು ಆಯಾ ಗ್ರಾಮಕ್ಕೆ ತೆರಳಿ ಅವರಿಗೆ ಪರಿಹಾರ ಕಲ್ಪಿಸಬೇಕು ಎಂದು ಸಚಿವರು ತಿಳಿಸಿದರು.
ನೀರಿನ ಮೂಲ ಗುರುತಿಸಿ: ಜಿಲ್ಲೆಯ 180 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಯಾವುದೇ ಹಳ್ಳಿಯಲ್ಲಿ ನೀರಿನ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮುಂಜಾಗ್ರತೆ ವಹಿಸಿ ಕನಿಷ್ಠ ಪಂಚಾಯಿತಿಗೊಂದರಂತೆ ಬೋರ್‍ವೆಲ್ ಕೊರೆದು ನೀರು ಪೂರೈಸುವ ನಿಟ್ಟಿನಲ್ಲಿ ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಡಲೇ ನೀರಿನ ಮೂಲ ಗುರುತಿಸಿಕೊಂಡಿರಬೇಕು ಎಂದು ಅವರು ತಿಳಿಸಿದರು.
ಮೇವು ಪೂರೈಸಿ: ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಸೋಮವಾರದೊಳಗಡೆ ಕನಿಷ್ಠ ಎರಡು ಲಾರಿಯಷ್ಟು ಮೇವನ್ನು ಪೂರೈಸುವಂತಾಗಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಗೋಶಾಲೆಗಳಿಗೆ ಮೇವನ್ನು ಕಳುಹಿಸಲು ಕ್ರಮ ವಹಿಸಬೇಕು ಎಂದು ಅವರು ಸಹಾಯಕ ಆಯುಕ್ತರಿಗೆ ಸೂಚಿಸಿದರು.
ಜಿಲ್ಲಾಡಳಿತಕ್ಕೆ ಅಭಿನಂದನೆ: ಬಸವಕಲ್ಯಾಣ ತಾಲೂಕಿನಲ್ಲಿ ಕೆರೆ ಹೂಳೆತ್ತುವ ಕಾಮಗಾರಿಯು ಅತ್ಯಂತ ಅಚ್ಚುಕಟ್ಟಾಗಿ ನಡೆಯುತ್ತಿದೆ. ಈ ಕಾರ್ಯ ಇದೆ ರೀತಿ ಮುಂದುವರೆಯಬೇಕು ಎಂದು ಬಸವಕಲ್ಯಾಣ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ನಾರಾಯಣರಾವ್ ಅವರು ಹೇಳಿದರು. ಜಿಲ್ಲೆಯಲ್ಲಿ ನರೇಗಾ ಯೋಜನೆಯು ಅಚ್ಚುಕಟ್ಟಾಗಿ ಅನುಷ್ಠಾನವಾಗುತ್ತಿದೆ. ಉದ್ಯೋಗ ನೀಡಿ ಎನ್ನುವ ಪ್ರತಿಯೊಬ್ಬರಿಗೆ ಕೆಲಸ ಕೊಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ತಿಳಿಸಿದರು. ನರೇಗಾ ಯೋಜನೆ ಅನುಷ್ಠಾನದ ಬಗ್ಗೆ ಪ್ರತಿ ವಾರ ಪರಿಶೀಲನೆ ಮಾಡುತ್ತಿದ್ದೇವೆ. ಸರಿಯಾಗಿ ಅನುಷ್ಠಾನಕ್ಕೆ ಕ್ರಮ ವಹಿಸಲು ಎಲ್ಲ ಪಿಡಿಓಗಳಿಗೆ ನಿರ್ದೇಶನ ನೀಡುತ್ತಿದ್ದೇನೆ ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಗೆ ತಿಳಿಸಿದರು.
ಅಸಮಾಧಾನ: ಜಿಲ್ಲೆಯಲ್ಲಿ ದಿನೇದಿನೇ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದೆ. ಜನರಿಗೆ ನೀರು ಸಿಗುತ್ತಿಲ್ಲ. ನರೇಗಾ ಯೋಜನೆ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ ಅವರು ಹಾಗೂ ನಗರದಲ್ಲಿ ಕೆಲವು ಕಾಲೋನಿಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲವೆಂದು ಅರವಿಂದಕುಮಾರ ಅರಳಿ ಅವರು ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಜಿಲ್ಲೆಯ ಹಲವಾರು ಕೆರೆಗಳಲ್ಲಿ ನೆರೇಗಾ ಯೋಜನೆಯಡಿ ಹೂಳೆತ್ತುವ ಕಾಮಗಾರಿ ನಡೆದಿವೆ. ಪ್ರತಿಯೊಂದು ಗ್ರಾಮದಲ್ಲಿ ಡಂಗೂರ ಬಾರಿಸಿ ನರೇಗಾ ಯೋಜನೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿದರು. ಬೀದರ್‍ನ ಕೆಲವು ಕಾಲೋನಿಗಳಲ್ಲಿ ನೀರಿನ ಸಮಸ್ಯೆ ಎದುರಾಗಿರುವುದು ನಿಜ. ಸಮಸ್ಯೆ ಇರುವ ಕಡೆಗಳಲ್ಲಿ ಬೋರ್‍ವೆಲ್ ಕೊರೆಯಿಸಿ ನೀರು ಪೂರೈಕೆಗೆ ಅಗತ್ಯ ಪರಿಹಾರ ಕಲ್ಪಿಸಲಾಗುವುದು ಎಂದು ಬೀದರ ನಗರಸಭೆಯ ಪೌರಾಯುಕ್ತರಾದ ಬಲಭೀಮ ಕಾಂಬಳೆ ತಿಳಿಸಿದರು.
ಹಣದ ಕೊರತೆಯಿಲ್ಲ: ಬರ ಪರಿಹಾರೋಪಾಯ ಕಾರ್ಯಕ್ಕೆ ಹಣದ ಕೊರತೆಯಿಲ್ಲ. 14 ಕೋಟಿ ರೂ. ಲಭ್ಯವಿದ್ದು, ಅದರಲ್ಲಿ ಈಗಾಗಲೇ ಎಲ್ಲಾ ತಾಲೂಕುಗಳಿಗೆ ತಲಾ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಆ ಹಣದಲ್ಲಿ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಅನುದಾನದ ಅಗತ್ಯವಿದ್ದರೆ ತಿಳಿಸಿ ಪಡೆದುಕೊಳ್ಳಿ ಎಂದು ಎಲ್ಲ ತಹಸೀಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ ಅವರು ಸಭೆಗೆ ತಿಳಿಸಿದರು.
ಜಿಲ್ಲೆಗೆ ಇತ್ತೀಚೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿತು. ಈ ವೇಳೆ ಜಿಲ್ಲೆಯಲ್ಲಿನ ಬರದ ವಾಸ್ತವ ಚಿತ್ರಣವನ್ನು ಅವರಿಗೆ ತಿಳಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ವಿದ್ಯಾನಂದ.ಸಿ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಭಾರತಬಾಯಿ ಶೇರಿಕಾರ, ಉಪಾಧ್ಯಕ್ಷರಾದ ಡಾ.ಪ್ರಕಾಶ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಗಾಳಿ, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಡಾ.ಶಂಕರ ವಣಕ್ಯಾಳ, ಗ್ಯಾನೇಂದ್ರಕುಮಾರ ಗಂಗವಾರ, ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...