ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು : ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ. ಪಾಟೀಲ ಮುನೇನಕೊಪ್ಪ

Source: SO News | By Laxmi Tanaya | Published on 28th September 2021, 8:01 AM | State News | Don't Miss |

ಧಾರವಾಡ : ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಪೂರೈಸಲು ಸರ್ಕಾರ ಸಿದ್ಧವಾಗಿದ್ದು, ಈಗಾಗಲೇ ವಿವಿಧ ಯೋಜನೆಗಳಿಗಾಗಿ ಜಿಲ್ಲೆಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸರ್ಕಾರದ ಅನುದಾನವನ್ನು ಸದುಪಯೋಗ ಮಾಡಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ತೊಡಗಿಸಿಕೊಳ್ಳಬೇಕೆಂದು ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬಿ. ಪಾಟೀಲ ಮುನೇನಕೊಪ್ಪ ಹೇಳಿದರು.

 ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ 2021-22 ನೇ ಸಾಲಿನ ಜೂನ್-2021 ಕ್ಕೆ ಸಾಧಿಸಿರುವ ಪ್ರಗತಿಗೆ ಅನುಗುಣವಾಗಿ ಮೊದಲ ತ್ರೈಮಾಸಿಕ ಕೆಡಿಪಿ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಜಿಲ್ಲೆಯಲ್ಲಿ ರೈತರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿಗೆ ಜಿಲ್ಲೆಯಲ್ಲಿ 17 ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ತೇವಾಂಶ   ಸಮಸ್ಯೆಯಿಂದ ಅನೇಕ ರೈತರು ಹೆಸರುಕಾಳು ಖರೀದಿಗೆ ತೊಂದರೆಯಾಗಿದೆ. ಈ ಕುರಿತು ಅಧಿಕಾರಿಗಳು ಕ್ರಮವಹಿಸಿ ರೈತರಿಗೆ ತೊಂದರೆಯಾಗದಂತೆ ಪರಿಹರಿಸಬೇಕು. 

 ಧಾರವಾಡ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೋವಿಡ್ ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲೆಯಲ್ಲಿ ಲಸಿಕಾಕರಣವನ್ನು ಯಶಸ್ವಿಯಾಗಿ ಮಾಡಿದ್ದಾರೆ. ವಿವಿಧ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್‍ಗಳ ನಿರ್ಮಾಣಕ್ಕೆ ಕ್ರಮ ವಹಿಸಿ, ಕಾಮಗಾರಿ ಮುಕ್ತಾಯಗೊಳಿಸಿ ಆರಂಭ ಹಂತದಲ್ಲಿವೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ತೊಂದರೆ ಅನುಭವಿಸುವ ಕುರಿತು ಮತ್ತು ಹೆಬ್ಬಳ್ಳಿ ಹಾಗೂ ನೂಲ್ವಿ ಆಸ್ಪತ್ರೆಗಳಲ್ಲಿ ಅಲ್ಲಿನ ಸಿಬ್ಬಂದಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಕುರಿತು ವರದಿಯಾಗಿದೆ. ಹಿರಿಯ ಅಧಿಕಾರಿಗಳು ಸಿಬ್ಬಂದಿಗಳ ಸಮಸ್ಯೆಗೆ ಸ್ಪಂದಿಸಿ ಬಗೆಹರಿಸಬೇಕು. ಮತ್ತು ಈ ಕುರಿತು ವರದಿಯನ್ನು ಸಲ್ಲಿಸಬೇಕೆಂದು ತಿಳಿಸಿದರು. ಕಲಘಟಗಿ ತಾಲೂಕಾ ಆಸ್ಪತ್ರೆಯಲ್ಲಿರುವ ಮುಖ್ಯ ವೈದ್ಯಾಧಿಕಾರಿ ವಿರುದ್ಧ ಅನೇಕ ದೂರುಗಳು ಕೇಳಿಬಂದಿದ್ದು, ಅವರ ಬದಲಾವಣೆಗಾಗಿ ಸರ್ಕಾರಕ್ಕೆ ವರದಿ ಮತ್ತು ಶಿಫಾರಸ್ಸು ಮಾಡಲು ಸಚಿವರು ಸೂಚಿಸಿದರು.  

 ಗ್ರಾಮಗಳು ಸೇರಿದಂತೆ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ 368 ಹಳ್ಳಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪ್ರತಿ ಮನೆಗೂ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಗುತ್ತಿಗೆದಾರರು ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸದಂತೆ ಮತ್ತು ಕಳಪೆ ಕಾಮಗಾರಿ ಮಾಡದಂತೆ ಅಧಿಕಾರಿಗಳು ನಿರಂತರವಾಗಿ ನಿಗಾವಹಿಸಿ ಕಾಮಗಾರಿ ಗುಣಮಟ್ಟತೆಯನ್ನು ಕಾಪಾಡಬೇಕೆಂದು ಅವರು ಸೂಚಿಸಿದರು. 

 ಸರ್ಕಾರದಿಂದ ಬಿಡುಗಡೆಯಾದ ನಿರ್ದಿಷ್ಟ ಯೋಜನೆಗಳ ಅನುದಾನಗಳನ್ನು ಟೆಂಡರ್ ಮೂಲಕ ಕಾಮಗಾರಿ ಪ್ರಾರಂಭಿಸಲಾಗುವುದು. ಕಳೆದ 2-3 ವರ್ಷಗಳ ನಿರಂತರ ಮಳೆಯಿಂದಾಗಿ ಅನೇಕ ಗ್ರಾಮೀಣ ಪ್ರದೇಶದ ರಸ್ತೆಗಳು ಹಾಳಾಗಿದ್ದು, ತುರ್ತು ದುರಸ್ತಿಗೆ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಗುಣಮಟ್ಟದಿಂದ ನಿರ್ಮಿಸಲು ಸಮೀಕ್ಷೆ ಮಾಡಿ ಅಂದಾಜು ವೆಚ್ಚ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.  

 ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಜಾನುವಾರುಗಳ ಕಳ್ಳತನ ಹಾಗೂ ವಾಹನಗಳ ಬ್ಯಾಟರಿ ಕಳ್ಳತನದ ಬಗ್ಗೆ ರೈತರಿಂದ, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಈ ಕುರಿತು ಪೊಲೀಸ್ ಇಲಾಖೆ ಕ್ರಮವಹಿಸಿ ಆರೋಪಿಗಳನ್ನು ಪತ್ತೆ ಮಾಡಬೇಕು ಮತ್ತು ಗ್ರಾಮೀಣ ಪ್ರದೇಶದಲ್ಲೂ ಪೊಲೀಸ್ ಗಸ್ತು ವ್ಯವಸ್ಥೆಯನ್ನು ನಿರಂತರವಾಗಿ ಮಾಡಬೇಕು. ಈ ಕುರಿತು ಕ್ರಮವಹಿಸಲು ಜನಪ್ರತಿನಿಧಿಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ಜರುಗಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. 

 ವಿವಿಧ ಗ್ರಾಮ ಪಂಚಾಯತ್‍ಗಳಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಮಾಡಲಾಗಿದೆ ಎಂಬ ದೂರುಗಳು ಬರುತ್ತಿದ್ದು, ಪರಿಶೀಲಿಸಲಾಗುವುದು ಮತ್ತು ಯಾವುದೇ ಗ್ರಾಮ ಪಂಚಾಯತ್ ಪಿಡಿಒ ಮತ್ತು ಅಧಿಕಾರಿ ಅವ್ಯವಹಾರ ಮಾಡಿದ್ದರೆ ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಹೇಳಿದರು.
   
 ಜಿಲ್ಲೆಯಲ್ಲಿ ರೇಷ್ಮೆ ಬೆಳೆ ವಿಸ್ತೀರ್ಣವಾಗುತ್ತಿದ್ದು, ಹೆಚ್ಚಿನ ರೈತರು ರೇಷ್ಮೆವಹುಳು ಸಾಕಾಣಿಕೆಗೆ ಆಸಕ್ತಿ ತೋರುತ್ತಿದ್ದಾರೆ. ರೇಷ್ಮೆ ಬೆಳೆ ವಿಸ್ತೀರ್ಣಕ್ಕಾಗಿ ರೇಷ್ಮೆ ಇಲಾಖೆಯಿಂದ ಮಾಹಿತಿ ಶಿಬಿರ, ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯ ರೇಷ್ಮೆಗೆ ಉತ್ತಮ ದರ ದೊರಕಿಸುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ರೇಷ್ಮೆ ಮಾರುಕಟ್ಟೆ ಪ್ರಾರಂಭಿಸಲು ಸರ್ಕಾರದ ಮಟ್ಟದಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.   

 ರಾಜ್ಯದಲ್ಲಿ ಕೈಮಗ್ಗ ನೇಕಾರರಿಗೆ ಕೋವಿಡ್ ಸಂದರ್ಭದಲ್ಲಿ ಬಹುದೊಡ್ಡ ಪರಿಹಾರ ನೀಡಲಾಗಿದೆ. ಟೆಕ್ಸ್ ಟೈಲ್ ಮತ್ತು ಕೈಮಗ್ಗ ಇಲಾಖೆಯಲ್ಲಿ ಸುಮಾರು 10 ಲಕ್ಷ ಉದ್ಯೋಗ ಸೃಷ್ಟಿಸಲಾಗಿದೆ. ನೇಕಾರರ     ಸಾಲ ಮನ್ನಾ ಮಾಡಲಾಗಿದ್ದು, ನೇಕಾರರ ಸಮಸ್ಯೆಗಳ ಕುರಿತು ನೇಕಾರ ಪ್ರತಿನಿಧಿಗಳು ಹಾಗೂ ರಾಜ್ಯ  ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ಸಭೆ ಜರುಗಿಸಿ ಚರ್ಚಿಸಲಾಗುವುದು ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.

 ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ ಶೆಟ್ಟರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರತಿಯೊಬ್ಬ ರೈತರಿಗೆ ಬೆಳೆವಿಮೆ, ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಹಾರದ ಬಗ್ಗೆ ಮಾಹಿತಿ ತಲುಪುವಂತೆ ಕೃಷಿ ಇಲಾಖೆ ಕ್ರಮ ವಹಿಸಬೇಕು. ಬೆಳೆವಿಮೆ ಬಗ್ಗೆ ಸರಿಯಾದ ಮಾಹಿತಿ ನೀಡಿ ಅದನ್ನು ಸರಿಯಾದ ಕ್ರಮದಲ್ಲಿ ದಾಖಲಿಸಬೇಕು. ಬೆಳೆ ಪರಿಹಾರ ಮಂಜೂರಾತಿ ಸಂದರ್ಭದಲ್ಲಿ ಯಾವುದೇ ರೀತಿಯ ತಪ್ಪು ಅಥವಾ ಗೊಂದಲಗಳಿಗೆ ಅವಕಾಶವಾಗದಂತೆ ಮತ್ತು ರೈತರಿಂದ ದೂರುಗಳು ಬರದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು. 

 ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಕೃಷಿ ಇಲಾಖೆಗೆ ಸರ್ಕಾರದಿಂದ ಬರುವ ಬೆಳೆವಿಮೆ ಪರಿಹಾರಗಳನ್ನು ನಿರ್ದಿಷ್ಟ ಫಲಾನುಭವಿಗಳಿಗೆ ಪೂರೈಸಿ, ಜನಪ್ರತಿನಿಧಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಬೇಕು. ತೋಟಗಾರಿಕೆ ಇಲಾಖೆಯ ಕುರಿತು ರೈತರಿಗೆ ನಿರ್ದಿಷ್ಟ ಮಾಹಿತಿ ನೀಡಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಇಲಾಖೆಯ ನೀತಿ ನಿಯಮಗಳನ್ನು ಪಾಲಿಸಬೇಕು.

 ಹುಬ್ಬಳ್ಳಿಯಿಂದ ನವಲಗುಂದ ಕಡೆಗೆ ಹೋಗುವ ರಸ್ತೆಯಲ್ಲಿರುವ ರೈಲ್ವೆ ಬ್ರಿಡ್ಜ್ ಪಕ್ಕದಲ್ಲಿ ಸರ್ವಿಸ್ ರಸ್ತೆಯನ್ನು ನಿರ್ಮಿಸಿ, ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಯನ್ನು ತ್ವರಿತವಾಗಿ ನಡೆಸಬೇಕು. ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಸೆ.25 ರಿಂದ ರಾತ್ರಿ ಕಫ್ರ್ಯೂ ಅವಧಿಯನ್ನು 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಸ್ತರಿಸಲಾಗಿದ್ದು ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಹೇಳಿದರು.

 ಶಾಸಕ ಅಮೃತ ದೇಸಾಯಿ ಮಾತನಾಡಿ, ವಿವಿಧ ಇಲಾಖೆ ಅಧಿಕಾರಿಗಳು ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಮತ್ತು ಗುತ್ತಿಗೆದಾರರಿಗೆ ಕಾಮಗಾರಿ   ಟೆಂಡರ್ ನಿಯಮಗಳಿಗೆ ಅನುಗುಣವಾಗಿ ಪೂರ್ಣಗೊಂಡಿರುವುದನ್ನು ಖಾತರಿಪಡಿಸಿ ವರದಿ ನೀಡುವ ಪೂರ್ವದಲ್ಲಿಯೇ ಬಿಲ್ ಮಾಡಿ ಹಣ ಪಾವತಿಸುತ್ತಾರೆ. ಇದರಿಂದಾಗಿ ನಿರ್ಮಾಣ ಹಂತದಲ್ಲಿಯೇ ಅನೇಕ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಹಾಳಾಗುತ್ತಿವೆ ಎಂದು ಹೇಳಿದರು. ಗ್ರಾಮೀಣ ಭಾಗದಲ್ಲಿ ರಸ್ತೆ, ಫಲಾನುಭವಿಗಳಿಗೆ ಸರ್ಕಾರದಿಂದ ನೀಡುವ ಅನುದಾನ, ಸೌಲಭ್ಯಗಳ ಕುರಿತು ಆಯಾ ಶಾಸಕರಿಗೆ ಮಾಹಿತಿ ನೀಡಬೇಕು ಮತ್ತು ಕಾಮಗಾರಿಗಳಲ್ಲಿ ಯಾವುದೇ ರೀತಿಯ ಅವ್ಯವಹಾರ, ಕಳಪೆತನಕ್ಕೆ ಅವಕಾಶವಿಲ್ಲದಂತೆ ಕೆಲಸ ಮಾಡಬೇಕೆಂದು ತಿಳಿಸಿದರು. 

 ಶಾಸಕ ಸಿ.ಎಂ. ನಿಂಬಣ್ಣವರ ಮಾತನಾಡಿ, ಕಲಘಟಗಿ ತಾಲೂಕಾ ಆಸ್ಪತ್ರೆಯ ಸಿಎಂಓ ಮೇಲೆ ಸಾರ್ವಜನಿಕರು ಅನೇಕ ದೂರುಗಳನ್ನು ನೀಡಿದ್ದಾರೆ. ಅವರನ್ನು ಬದಲಾಯಿಸಿ ಬೇರೆ ಅಧಿಕಾರಿಯನ್ನು ನೇಮಿಸಬೇಕು. ಸಾರಿಗೆ ಇಲಾಖೆ ಪ್ರತಿ ಹಳ್ಳಿಗೆ ಮೊದಲಿನಂತೆ ಸಾರಿಗೆ ಬಸ್‍ಗಳನ್ನು ಕಳುಹಿಸಬೇಕು. ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿ ತರಗತಿಗಳಿಗೆ ಹಾಜರಾಗುತ್ತಿಲ್ಲ. ಅಧಿಕಾರಿಗಳು ಈ ಕುರಿತು ಕೂಡಲೇ ಕ್ರಮ ವಹಿಸಬೇಕೆಂದು ತಿಳಿಸಿದರು. 

 ಶಾಸಕಿ ಕುಸುಮಾವತಿ ಶಿವಳ್ಳಿ ಮಾತನಾಡಿ, ಕುಂದಗೋಳ ತಾಲೂಕಿನ ಗ್ರಾಮೀಣ ರಸ್ತೆಗಳು ಮತ್ತು ವಿವಿಧ ಕಡೆ ಸೇತುವೆಗಳು ಹಾಳಾಗಿವೆ. ಇವುಗಳ ದುರಸ್ತಿ ಹಾಗೂ ಮರುನಿರ್ಮಾಣಕ್ಕೆ ಕ್ರಮವಹಿಸಬೇಕು. ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಅವರು ಹೇಳಿದರು.

 ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಉಂಟಾಗಿರುವ ಮಳೆಹಾನಿ ಕುರಿತು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕೇಂದ್ರತಂಡವು ಜಿಲ್ಲೆಗೆ ಭೇಟಿ ನೀಡಿ ಈ ಕುರಿತು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಮತ್ತು ಸಮರ್ಥವಾಗಿ ಬಳಸಿ, ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಸಕ್ತ ಸಾಲಿನ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡಿ ನಿಗದಿತ ಅಭಿವೃದ್ಧಿ ಗುರಿ ಸಾಧಿಸಲು ಮತ್ತು ಕ್ರಿಯಾಯೋಜನೆ ಅನುಸಾರ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗಿದೆ ಎಂದು ಅವರು ಸಭೆಗೆ ತಿಳಿಸಿದರು.

 ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ವೇದಿಕೆಯಲ್ಲಿದ್ದರು. ಸಭೆಯಲ್ಲಿ ತ್ರೈಮಾಸಿಕ ಕೆಡಿಪಿ ಸಮಿತಿಯ ನಾಮನಿರ್ದೇಶಿತ ಸದಸ್ಯ ನಾಗನಗೌಡ ಪಾಟೀಲ ಮಾತನಾಡಿ, ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಅಗ್ರಿ ಮತ್ತು ಏರ್‍ಟೆಕ್ ಕೈಗಾರಿಕೆಗಳಿಗೆ ಹೋಗುವ ರಸ್ತೆಯುದ್ದಕ್ಕೂ ಅವೈಜ್ಞಾನಿಕವಾಗಿ ರಸ್ತೆ ತಡೆಗಳನ್ನು ನಿರ್ಮಿಸಲಾಗಿದೆ. ಇದರಿಂದ ಉದ್ಯೋಗಿಗಳಿಗೆ ಸಾಕಷ್ಟು ಸಮಸ್ಯೆಯಾಗಿದೆ ಎಂದರು. ಮತ್ತು ಧಾರವಾಡ ತಾಲೂಕಿನಲ್ಲಿ ಬೇಸಿಗೆ ಕಾಲದಲ್ಲಿಯೂ ಹಸಿ ಮೆಣಸಿನಕಾಯಿ ಬೆಳೆ ಬೆಳೆಯುತ್ತಾರೆ. ಆದರೆ ಬೆಳೆ ಸಮೀಕ್ಷೆ ಆ್ಯಪ್‍ದಲ್ಲಿ ಈ ಬೆಳೆಯನ್ನು ಸಮೀಕ್ಷೆ ಮಾಡಿ ಅಪ್‍ಲೋಡ್ ಮಾಡಲು ಅವಕಾಶವಿಲ್ಲ. ಇದರಿಂದ ಅನೆಕ ರೈತರಿಗೆ ಸಮಸ್ಯೆಯಾಗುತ್ತಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ವಿನಂತಿಸಿದರು. 

 ಸಭೆಯಲ್ಲಿ ತ್ರೈಮಾಸಿಕ ಕೆಡಿಪಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ವಜ್ರಕುಮಾರ ಅಡಿವೆಪ್ಪ ಮಾದನಭಾವಿ, ಶೇಖರ್ ರಾಮಪ್ಪ ಮರಿಯಪ್ಪನವರ್, ಬಸನಗೌಡ ಕಲ್ಲನಗೌಡ ಪೊಲೀಸ್ ಪಾಟೀಲ, ತವಣಪ್ಪ ರಾಯಪ್ಪ ಕುರಕುರಿ ಮತ್ತು ಸಾವಿತ್ರಿ ಎಲ್. ಹುಬ್ಬಳ್ಳಿ ಉಪಸ್ಥಿತರಿದ್ದರು. 

 ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಉಪವಿಭಾಗಾಧಿಕಾರಿ ಡಾ: ಗೋಪಾಲಕೃಷ್ಣ ಬಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಕೃಷಿ ಇಲಾಖೆಯ ಜಂಟಿನಿರ್ದೇಶಕ ರಾಜಶೇಖರ್ ಬಿಜಾಪೂರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಾಶೀನಾಥ ಭದ್ರಣ್ಣವರ, ಲೋಕೋಪಯೋಗಿ ಇಲಾಖೆಯ ಇ.ಇ. ಎಸ್.ಬಿ. ಚೌಡಣ್ಣವರ, ಲೀಡ್‍ಬ್ಯಾಂಕ್ ಮ್ಯಾನೇಜರ್ ಅಣ್ಣಯ್ಯ, ರೇಷ್ಮೆ ಇಲಾಖೆಯ ಉಪನಿರ್ದೇಶಕ ಮಾಲತೇಶ, ಜಿಲ್ಲಾ ಆರೋಗ್ಯಾಧಿಕಾರಿ ಡಾ:ಯಶವಂತ ಮದೀನಕರ, ಗ್ರಾಮೀಣ ಕುಡಿಯುವ ನೀರು ವಿಭಾಗದ ಇ.ಇ. ರಾಜಶೇಖರ ಮುನವಳ್ಳಿ  ಸೇರಿದಂತೆ  ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಪ್ರಗತಿ ಮಾಹಿತಿ ನೀಡಿದರು. 

 ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಎಲ್ಲ ತಾಲೂಕುಗಳ ತಹಶೀಲ್ದಾರರು, ಇಓ ಗಳು ಭಾಗವಹಿಸಿದ್ದರು. 

 ಸಭೆಯ ಪೂರ್ವದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಅಂಗವಿಕಲರ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ಮತ್ತು ಎಸ್‍ಎಸ್‍ಎಲ್‍ಸಿ ಹಾಗೂ ನಂತರದ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ಸಾಂಕೇತಿಕವಾಗಿ ಕೆಲವರಿಗೆ ವಿತರಿಸಿ, ಉಳಿದ ಫಲಾನುಭವಿಗಳಿಗೆ ಆಯಾ ಕ್ಷೇತ್ರದ ಶಾಸಕರ, ಜನಪ್ರತಿನಿಧಿಗಳ ಸಮ್ಮುಖದಲ್ಲಿ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

 ಸಚಿವರು ಕೆಡಿಪಿ ಸಭೆಯಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿಯಿಂದ 2021-22ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ತೋಟಗಾರಿಕೆ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ಪುಸ್ತಕವನ್ನು ಬಿಡುಗಡೆ ಮಾಡಿದರು. 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...