ಮಣಿಪುರದಲ್ಲಿ ಕಾನೂನು-ಸುವ್ಯವಸ್ಥೆ ಕುಸಿದು ಬಿದ್ದಿದೆ: ಸುಪ್ರೀಂ ಕೋರ್ಟ್; ನ್ಯಾಯಾಲಯಕ್ಕೆ ಹಾಜರಾಗುವಂತೆ ಡಿಜಿಪಿಗೆ ಸಮನ್ಸ್

Source: Vb | By I.G. Bhatkali | Published on 3rd August 2023, 8:02 AM | National News |

ಹೊಸದಿಲ್ಲಿ: ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಬಣ್ಣಿಸಿದೆ. ಹಿಂಸಾ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪೊಲೀಸರು ವಿಳಂಬವಾಗಿ ದಾಖಲಿಸುತ್ತಿದ್ದಾರೆ ಹಾಗೂ  ತನಿಖೆಯನ್ನು ನಿರಾಸಕ್ತಿಯಿಂದ ನಡೆಸಲಾಗುತ್ತಿದೆ ಎಂದು ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ, ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.

“ಮೇ ತಿಂಗಳ ಆರಂಭದಿಂದ ಜುಲೈ ತಿಂಗಳ ಕೊನೆಯವರೆಗೆ ಮಣಿಪುರದಲ್ಲಿ ಕಾನೂನೇ ಇರಲಿಲ್ಲ ಎಂಬ ಅಭಿಪ್ರಾಯಕ್ಕೆ ನಾವು ಬರುವಂತೆ ಇದು ಮಾಡುತ್ತದೆ' ಎಂದು ಮುಖ್ಯ ನ್ಯಾಯಾಧೀಶ ಚಂದ್ರ ಚೂಡ್ ಹೇಳಿದರು. “ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿತ್ತು. ಎಷ್ಟೆಂದರೆ ನಿಮಗೆ ಎಫ್‌ಐಆರ್‌ಗಳನ್ನು ದಾಖಲಿಸಲೂ ಸಾಧ್ಯವಾಗಲಿಲ್ಲ' ಎಂದರು.

ಪೊಲೀಸರ ಜಡ್ಡುಗಟ್ಟಿದ ತನಿಖೆಯ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿತು. ತನಿಖೆಗಳಲ್ಲಿ ಯಾವುದೇ ಪ್ರಗತಿ ಇಲ್ಲ, ತುಂಬಾ ಸಮಯ ಕಳೆದರೂ ಆರೋಪಿಗಳ ಬಂಧನವೇ ಆಗಿಲ್ಲ ಎಂದು ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಹೇಳಿದರು.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಜುಲೈ 25ರವರೆಗೆ ರಾಜ್ಯದಲ್ಲಿ 6,532 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಸರಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಸ್ತಾ ಹೇಳಿದರು.

250 ಮಂದಿಯನ್ನು ಬಂಧಿಸಲಾಗಿದೆ ಮತ್ತು 12,000 ಮಂದಿಯನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದರು.

ತನಿಖೆ ನಡೆಸಲು ರಾಜ್ಯದ ಪೊಲೀಸರು ಅಸಮರ್ಥರಾಗಿದ್ದಾರೆ ಎಂದು ಹೇಳಿದ ಸುಪ್ರೀಂ ಕೋರ್ಟ್, 6,000 ಎಫ್‌ಐಆರ್‌ಗಳು ದಾಖಲಾದರೂ ಈವರೆಗೆ ಕೇವಲ ಏಳು ಮಂದಿಯನ್ನಷ್ಟೇ ಯಾಕೆ ಬಂಧಿಸಲಾಗಿದೆ ಎಂದು ಪ್ರಶ್ನಿಸಿತು.

“ತನಿಖೆ ಜಡ್ಡುಗಟ್ಟಿ ಹೋಗಿದೆ. ಆರೋಪಿಗಳನ್ನು ಬಂಧಿಸಲು ಹೆಚ್ಚಿನ ಶ್ರಮ ಪಟ್ಟಿಲ್ಲ ಅಥವಾ ಶ್ರಮವನ್ನೇ ಪಡಲಾಗಿಲ್ಲ. ಅದೂ ಅಲ್ಲದೆ ಅಪರಾಧ ನಡೆದ ಸುಮಾರು ಸಮಯದ ಬಳಿಕ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಆಘಾತಕಾರಿ ಪ್ರವೃತ್ತಿಯನ್ನು ನಾವು ನೋಡುತ್ತಿದ್ದೇವೆ. ಇದು ಸಂಗ್ರಹಿಸಲಾಗಿರುವ ಪುರಾವೆಯ ವಿಶ್ವಾಸಾರ್ಹತೆಯ ಮೇಲೆ ಅನುಮಾನ ಪಡುವಂತೆ ಮಾಡಿದೆ” ಎಂದು ಮುಖ್ಯ ನ್ಯಾಯಾಧೀಶ ಚಂದ್ರಚೂಡ್ ಹೇಳಿದರು.

ಇದು ನ್ಯಾಯ ವ್ಯವಸ್ಥೆಯ ಮೇಲೆ ಜನರು ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ ಹಾಗೂ ಸಾಂವಿಧಾನಿಕ ವ್ಯವಸ್ಥೆಯ ಕಾರ್ಯನಿರ್ವಹಣೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ನುಡಿದರು. ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 7ಕ್ಕೆ ನಿಗದಿಪಡಿಸಿತು ಹಾಗೂ ಅಂದು ಮಧ್ಯಾಹ್ನ 2 ಗಂಟೆಗೆ ಸ್ವತಃ ಹಾಜರಿರುವಂತೆ ಮಣಿಪುರದ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿತು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...