ಸೀಟು ಹಂಚಿಕೆ ವಿವಾದ; ಬಿಜೆಪಿ ಜೆಡಿಎಸ್  ಮೈತ್ರಿಯಲ್ಲಿ ಬಿರುಕು? 

Source: SOnews | By Staff Correspondent | Published on 18th March 2024, 10:05 PM | State News |

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ತೆಗೆದುಕೊಳ್ಳಲು ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಸ್ವತಂತ್ರವಾಗಿ ಸ್ಪರ್ಧಿಸಿದರೂ ಹಾಸನ ಹಾಗೂ ಮಂಡ್ಯದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು ಈ ಮೂಲಕ ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡುತ್ತಿದೆ ಎಂಬ ಅನುಮಾನ ಉಂಟಾಗಿದೆ.

ಸೋಮವಾರ ನಗರದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಬಳಿ ನಾವೇನು 6-7 ಸ್ಥಾನಗಳನ್ನು ಕೇಳಿಲ್ಲ. ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ರಾಜ್ಯದ 18 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯವಿದೆ. ಅದನ್ನು ಬಳಸಿಕೊಳ್ಳುವಂತೆ ಬಿಜೆಪಿಗೆ ಹೇಳುತ್ತೇನೆ ಎಂದರು. 

ಬಿಜೆಪಿ ವಿರುದ್ಧ ಅಸಮಾಧಾನ?: ಬಿಜೆಪಿ ಹೈಕಮಾಂಡ್ ರಾಜ್ಯದ 20 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಾಗ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಪಕ್ಷದ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳು ಹಾಗೂ ಜೆಡಿಎಸ್ ಕೋರ್ ಕಮಿಟಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ನಮ್ಮನ್ನು, ನಮ್ಮ ಪಕ್ಷವನ್ನು ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಆರಂಭದಲ್ಲಿಯೆ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.   ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. ಶೇ.3 ರಿಂದ 4ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ. ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ನಾಯಕರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಕಿಡಿಗಾರಿದ್ದಾರೆ.  ಪ್ರಧಾನಿ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂದರು.    ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿ ಅವರ ಬಗ್ಗೆ ಅಪಾರ ಗೌರವ ಇದೆ. ಆದರೆ, ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದರು.  ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಹೇಳಿದ್ದೀರಿ ನೀವು. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್ ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ, ಈಗ ನೋಡಿದರೆ ಬಿಜೆಪಿ 2 ಸೀಟಿಗೆ ಬಂದು ನಿಂತಿದೆ ಎಂದು ಚುನಾವಣಾ ಉಸ್ತುವಾರಿಗಳು ಕುಮಾರಸ್ವಾಮಿಯನ್ನು ಪ್ರಶ್ನಿಸಿದರು.  

ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು. ಇನ್ನೊಮ್ಮೆ ಅಮಿತ್ ಶಾ, ಜೆ.ಪಿ.ನಡ್ಡಾ ಜತೆ ಮಾತನಾಡುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಿದ ದೇವೇಗೌಡರು, ಇಲ್ಲವಾದರೆ ನಾನೆ ದಿಲ್ಲಿಗೆ ಹೋಗಿ ಬರುತ್ತೇನೆ ಎಂದರು.   ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಭೆಗೆ ತಿಳಿಸಿದ ಕುಮಾರಸ್ವಾಮಿ, ಯಾವುದೆ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆ ಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ ಎಂದು ತಿಳಿಸಿದರು.  ಸಭೆಯಲ್ಲಿ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಲೀಲಾದೇವಿ ಆರ್.ಪ್ರಸಾದ್, ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಜಿ.ಕೆ.ವೆಂಕಟ ಶಿವಾರೆಡ್ಡಿ, ಬಿ.ಸುರೇಶ್ ಬಾಬು, ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಸ್ವರೂಪ್ ಪ್ರಕಾಶ್, ರಾಜೂಗೌಡ, ಬಿ.ಎಂ.ಫಾರೂಕ್, ಎಂ.ಟಿ.ಕೃಷ್ಣಪ್ಪ, ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಂಜೇಗೌಡ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...