ಭಟ್ಕಳ: ಯಶಸ್ವಿಗೊಂಡ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ:ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ

Source: sonews | By MV Bhatkal | Published on 17th October 2021, 7:49 PM | Coastal News |

ಭಟ್ಕಳ: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಮತ್ತೆ ಆರಂಭವಾಗಿದ್ದು ತಾಲೂಕಿನ ಹಡೀಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಹಾಗೂ ಸುತ್ತಮುತ್ತಲ ಗ್ರಾಮದ ನೂರಾರು ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವೀಗೊಳಿಸಿದರು. 

ಕಾರ್ಯಕ್ರಮದಲ್ಲಿ ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿಕೊಡಲಾಗಿದ್ದು, ಉಳಿದಂತೆ ತನಿಖೆ, ವರದಿ ಅಗತ್ಯವಿದ್ದವುಗಳನ್ನು ಕಾಲ ಮಿತಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಯಿತು. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಸೀಲ್ದಾರ ಎಸ್. ರವಿಚಂದ್ರ ತಿಂಗಳಿಗೊಮ್ಮೆ ಅಧಿಕಾರಿಗಳು ಒಂದು ಗ್ರಾಮಕ್ಕೆ ಬಂದು ಸಮಸ್ಯೆ ಆಲಿಸಿ ಸ್ಥಳದಲ್ಲೇ ಪರಿಹಾರ ನೀಡುವುದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮುಖ್ಯ ಉದ್ಧೇಶವಾಗಿದೆ. ಹಳ್ಳಿಯಿಂದ ಬಂದು ಕಚೇರಿಯಿಂದ ಕಚೇರಿಗೆ ಜನರು  ಅಲೆದಾಡುವುದನ್ನು ತಪ್ಪಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಪ್ರತಿಯೋರ್ವರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. 


ಕೋಣಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಗ್ರಾಮಗಳು, ಹಡೀಲ ಮಜಿರೆ, ಸುತ್ತಮುತ್ತಲಿನ ಗ್ರಾಮದ ಜನರು ಅತಿಕ್ರಮಣ ಸಕ್ರಮ, ಸಂಧ್ಯಾ ಸುರಕ್ಷಾ ಸೇರಿದಂತೆ  ವಿವಿಧ ಪಿಂಚಣಿ, ಬಸ್ ವ್ಯವಸ್ಥೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ ಪರಿಹಾರಕ್ಕಾಗಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೋಣಾರ ಗ್ರಾ.ಪಂ. ಅಧ್ಯಕ್ಷ ಉದಯ ನಾಯ್ಕ, ತಾ.ಪಂ. ಪ್ರಭಾರೆ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ, ಗ್ರಾ.ಪಂ.ಸದಸ್ಯರಾದ ಮಂಜುನಾಥ ಹೆಬ್ಬಾರ, ಗೋವಿಂದ ನಾಯ್ಕ, ನಾಗಪ್ಪ ಗೊಂಡ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಇಲಾಖೆಯ ಜವಾಬ್ದಾರಿಯನ್ನು ನಿರ್ವಹಿಸಿದರು. 

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ನೀರೆರೆದು ಮಾತನಾಡಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ಸರಕಾರದ ವಿವಿಧ ಯೋಜನೆಗಳ ಬಗ್ಗೆ ತಿಳಿಸುವ ಮತ್ತು ಸಮಸ್ಯೆ ಅರಿತು ಪರಿಹಾರ ಕಲ್ಪಿಸುವ ಕಾರ್ಯಕ್ರಮ ಇದಾಗಿದ್ದು ಸರಕಾರದ ಒಂದು ಉತ್ತಮ ನಿರ್ಧಾರದ ಫಲವಾಗಿ ಜನತೆಯ ಬಳಿಗೇ ನಾವು ಬರುವಂತಾಗಿದೆ.  ಜನರಿಂದ ಅಹವಾಲು ಸ್ವೀಕರಿಸುವುದಲ್ಲದೇ ಹೆಚ್ಚಿನ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ತಾಲೂಕು ಮಟ್ಟದ ಅಧಿಕಾರಿಗಳೂ ಕೂಡಾ ಇಲ್ಲಿರುವುದರಿಂದ ಜನರಿಗೆ ಇದು ಅತ್ಯಂತ ಅನುಕೂಲಕರ ಕಾರ್ಯಕ್ರಮ ಎಂದರು. ಎಲ್ಲಿ ಹೆಚ್ಚಿನ ವ್ಯವಸ್ಥೆ ಇಲ್ಲವೋ ಆ ಭಾಗದಲ್ಲಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಭಟ್ಕಳದಲ್ಲಿ ನಡೆದ ಮೂರನೇ ಕಾರ್ಯಕ್ರಮ ಇದಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದ ಅವರು ಹಳ್ಳಿಗಳಿಗೆ ಎಲ್ಲಾ ಅಧಿಕಾರಿಗಳು ಬರುವುದರಿಂದ ಜನರ ಮತ್ತು ಗ್ರಾಮದ ಸಮಸ್ಯೆ ತಿಳಿಯಲು ಅನುಕೂಲವಾಗುತ್ತದೆ. ಹಡೀಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚಿನ ಅರ್ಜಿಗಳು ಬಂದಿದ್ದು, ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗಿದ್ದು, ಬಾಕಿ ಉಳಿದ ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

 116 ಅರ್ಜಿಗೆ ಸ್ಥಳದಲ್ಲೇ ಪರಿಹಾರ: ತಾಲೂಕಿನ ಹಡೀಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟೂ 268 ಅರ್ಜಿಗಳು ಬಂದಿದ್ದು ಅವುಗಳನ್ನು ಪರಿಶೀಲಿಸಿ 116 ಅರ್ಜಿಗಳನ್ನು  ಸಂಬಂಧ ಪಟ್ಟ ತಾಲೂಕಾ ಮಟ್ಟದ ಅಧಿಕಾರಿಗಳ ಶರಾದೊಂದಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು. 125ಕ್ಕೂ ಅಧಿಕ ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದರೆ, ಇನ್ನುಳಿದ ಅರ್ಜಿಗಳು ಅರಣ್ಯ,ಲೋಕೋಪಯೋಗಿ, ಕೋಣಾರ ಗ್ರಾ.ಪಂ, ಸಾರಿಗೆ, ಸಮಾಜ ಕಲ್ಯಾಣ ಮತ್ತಿತರ ಇಲಾಖೆಗೆ ಸೇರಿದ್ದಾಗಿವೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...