ಮಂಗನ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ: ಜಿ.ಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಸೂಚನೆ

Source: so news | Published on 26th September 2019, 11:57 PM | State News | Don't Miss |

 

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯಲ್ಲಿ ಶಂಕಿತ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಮಳೆಗಾಲ ಮುಗಿಯುವ ಮೊದಲೇ ವ್ಯಕ್ತಿಯೊಬ್ಬರಿಗೆ ಶಂಕಿತ ಮಂಗನ ಕಾಯಿಲೆ ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕೆಎಫ್‍ಡಿ ಲಸಿಕೆ, ಡಿಎಂಪಿ ಆಯಿಲ್ ಎಲ್ಲಾ ಆಸ್ಪತ್ರೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ಕೆಎಫ್‍ಡಿ ಕಾಣಿಸಿಕೊಳ್ಳಬಹುದಾದ ಪ್ರದೇಶಗಳಲ್ಲಿ ಎಲ್ಲರಿಗೂ ಲಸಿಕೆಯನ್ನು ಹಾಕಬೇಕು. ವೈದ್ಯಾಧಿಕಾರಿಗಳ ತಂಡಗಳನ್ನು ರಚಿಸಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಮಾತನಾಡಿ, ಎಲ್ಲಾ ಆಸ್ಪತ್ರೆಗಳಲ್ಲಿ ಲಸಿಕೆ ಸಾಕಷ್ಟು ಪ್ರಮಾಣದಲ್ಲಿ ಇವೆ. ಪ್ರಸ್ತುತ ಸುಮಾರು ಎರಡುಕಾಲು ಲಕ್ಷ ಡೋಸ್ ಲಸಿಕೆ ಲಭ್ಯವಿದ್ದು, ಜುಲೈ ತಿಂಗಳಿನಿಂದ ಇದುವರೆಗೆ ಒಂದು ಲಕ್ಷಕ್ಕೂ ಅಧಿಕ ಡೋಸ್ ಲಸಿಕೆಗಳನ್ನು ಈ ಪ್ರದೇಶಗಳ ಜನರಿಗೆ ಹಾಕಲಾಗಿದೆ. ಅಕ್ಟೋಬರ್ ಕೊನೆಯ ಒಳಗಾಗಿ ಎಲ್ಲರಿಗೂ ಲಸಿಕೆ ಹಾಕುವ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಇದೇ ರೀತಿ ಜಿಲ್ಲಾ ಮಟ್ಟದಲ್ಲಿ 45ಸಾವಿರ ಡಿಎಂಪಿ ತೈಲ ಬಾಟಲುಗಳು ಲಭ್ಯವಿದ್ದು, ಪ್ರತಿ ತಾಲೂಕಿನಲ್ಲಿ 6ಸಾವಿರ ಬಾಟಲು ಡಿಎಂಪಿ ಸರಬರಾಜು ಮಾಡಲಾಗಿದೆ. ಅಗತ್ಯ ಇರುವ ಕಡೆಗಳಲ್ಲಿ ಸಂಚಾರಿ ವೈದ್ಯಕೀಯ ಘಟಕದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಹೇಳಿದರು.
ಆಯುಷ್ಮಾನ್ ಭಾರತ ಯೋಜನೆ ಅನುಷ್ಟಾನದಲ್ಲಿರುವ ಆಸ್ಪತ್ರೆಗಳ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಬೇಕು. 108 ಅಂಬ್ಯುಲೆನ್ಸ್ ಮೂಲಕ ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗುತ್ತಿರುವ ಬಗ್ಗೆ ದೂರುಗಳಿದ್ದು, ಇನ್ನು ಮುಂದೆ ಇಂತಹ ದೂರುಗಳು ಬಾರದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಅವರು ತಿಳಿಸಿದರು.
ಒಂದು ತಿಂಗಳ ಗೌರವಧನ: ನೆರೆ ಪರಿಹಾರ ಕಾರ್ಯಗಳಿಗಾಗಿ ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರ ಒಂದು ತಿಂಗಳ ಗೌರವಧನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ನೆರೆ ಪರಿಹಾರ ಎಲ್ಲಾ ಸಂತ್ರಸ್ತರಿಗೂ ದೊರಕಬೇಕು. ಕಳೆದ ಸಾಲಿನಲ್ಲಿ ಅಡಿಕೆಗೆ ಕೊಳೆರೋಗ ಬಂದ ಪ್ರಕರಣಗಳಲ್ಲಿ ಇನ್ನೂ 8.10ಕೋಟಿ ರೂ. ಸರ್ಕಾರದಿಂದ ಬಿಡುಗಡೆಯಾಗಬೇಕಿದೆ. ಅದನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಸದಸ್ಯರು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಅಪರ ಜಿಲ್ಲಾಧಿಕಾರಿ ಅನುರಾಧ ಅವರು ಮಾತನಾಡಿ, ಬೆಳೆ ಹಾನಿ ಪರಿಹಾರಕ್ಕೆ ಪ್ರಥಮ ಹಂತದಲ್ಲಿ 9ಕೋಟಿ ರೂ. ಬಿಡುಗಡೆಯಾಗಿದೆ. 15ಸಾವಿರ ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಬೆಳೆಹಾನಿ ಸಮೀಕ್ಷೆಯಲ್ಲಿ ಯಾರನ್ನಾದರೂ ಬಿಟ್ಟು ಹೋಗಿದ್ದರೆ ಮತ್ತೆ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...