ಶಾಲಾ ಪಠ್ಯ ಪರಿಷ್ಕರಣೆ ವಿವಾದ; ತಪ್ಲೊಪ್ಪಿಕೊಂಡ ಶಿಕ್ಷಣ ಇಲಾಖೆ; ತಿದ್ದೋಲೆ ಹೊರಡಿಸಲು ರಾಜ್ಯ ಸರಕಾರದ ಆದೇಶ

Source: Vb | By I.G. Bhatkali | Published on 30th June 2022, 12:36 AM | State News |

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ಶಿಕ್ಷಣವನ್ನು ಕೇಸರೀಕರಣ ಮಾಡಲಾಗುತ್ತಿದೆ ಎಂದು ರಾಜ್ಯದಲ್ಲಿ ವಿವಾದವು ಸೃಷ್ಟಿಯಾಗಿತ್ತು. ಅಂಬೇಡ್ಕರ್, ಬಸವಣ್ಣ, ದಾಸರು ಸೇರಿದಂತೆ ನಾಡಿನ ಗಣ್ಯರಿಗೆ ಅಪಮಾನ ಮಾಡಲಾಗಿದೆ ಎಂದು ಪಠ್ಯಪರಿಷ್ಕರಣೆಯ ವಿವಾದವು ಪ್ರತಿಭಟನೆಯ ಸ್ವರೂಪವನ್ನು ಪಡೆದುಕೊಂಡಿತು. ಇದೀಗ ತಪ್ಲೊಪ್ಪಿಕೊಂಡ ರಾಜ್ಯ ಸರಕಾರವು ಒಂದರಿಂದ ಹತ್ತನೆಯ ತರಗತಿಯ ಕನ್ನಡ ಭಾಷಾ ವಿಷಯಗಳು, ಪರಿಸರ ಅಧ್ಯಯನ ಹಾಗೂ 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯಗಳ ಪರಿಷ್ಕೃತ ಪಠ್ಯ ಪುಸ್ತಕಗಳನ್ನು ಮಾರ್ಪಡಿಸಿ, 2022-23ನೇ ಸಾಲಿಗೆ ಅಳವಡಿಸಿ ತಿದ್ದೋಲೆ ಪ್ರಕಟಿಸಿ ಆದೇಶ ಹೊರಡಿಸಿದೆ.

ಈಗಾಗಲೇ ಪರಿಷ್ಕರಿಸಿರುವ ಪಠ್ಯ ಪುಸ್ತಕಗಳಲ್ಲಿನ ಬಿಟ್ಟುಹೋದ ಅಂಶಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಿದ್ದುಪಡಿ ಹಾಗೂ ಸೇರ್ಪಡೆಗೊಳಿಸಿ ತಿದ್ದೋಲೆ ಹೊರಡಿಸಲು ಅನುಮತಿ ನೀಡಿ ಎಂದು ರಾಜ್ಯಪಾಲರ ಹೆಸರಿನಲ್ಲಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಸಾಮಾನ್ಯವಾಗಿ ಪಠ್ಯಪುಸ್ತಕಗಳ ರಚನೆ ಪರಿಷ್ಕರಣೆಗಳಾದಾಗ ಅಗತ್ಯವಾದ ತಿದ್ದುಪಡಿಗಳನ್ನು ತಿದ್ದೋಲೆ ರೂಪದಲ್ಲಿ ನೀಡುವುದು ಶಿಕ್ಷಣ ಇಲಾಖೆಯಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರಕ್ರಿಯೆಯಾಗಿದೆ ಎಂದು ಶಿಕ್ಷಣ ಇಲಾಖೆಯು ಆದೇಶದಲ್ಲಿ ತನ್ನ ತಪ್ಪೋಪ್ಪಿಕೊಂಡಿದ್ದು, ತಿದ್ದೋಲೆಯ ವಿಷಯಾಂಶಗಳನ್ನು ಹಾಗೂ ಪಠ್ಯಪುಸ್ತಕದ ಸಾಫ್ಟ್ ಕಾಪಿಯನ್ನು ಕರ್ನಾಟಕ ಪಠ್ಯಪುಸ್ತಕ ಜಾಲತಾಣದಲ್ಲಿ ಅಳವಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.

ತಿದ್ದೋಲೆ ಪ್ರತಿಗಳನ್ನು ಪುಸ್ತಕ ಮುದ್ರಣಕ್ಕೆ ಕಾರ್ಯಾದೇಶವನ್ನು ಪಡೆದುಕೊಂಡ ಮುದ್ರಕರಿಂದ ಸಂಘದ ಅನುದಾನದಲ್ಲಿ ಎಲ್ಲ ಶಾಲೆಗಳಿಗೆ ತಲಾ ಒಂದು ಪ್ರತಿಯನ್ನು ವಿತರಿಸಲಾಗುವುದು ಎಂದು ತಿಳಿಸಿದೆ.

9ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ನಮ್ಮ ಸಂವಿಧಾನ ಎಂಬ ಪಾಠದಲ್ಲಿ ಸಂವಿಧಾನದ ಕರಡು ರಚನೆ ಸಮಿತಿ ಬಗ್ಗೆ ಉಲ್ಲೇಖ ಇರುತ್ತದೆ. ಅದರಲ್ಲಿ ಪರಿಷ್ಕೃತ ಪಠ್ಯದಲ್ಲಿ ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ಸಂವಿಧಾನದ ಶಿಲ್ಪಿ ಎಂದು ಕರೆಯಲಾಗಿದೆ ಎಂಬ ವಾಕ್ಯವು ಇಲ್ಲವಾಗಿದ್ದು, ಸಂವಿಧಾನದ ಶಿಲ್ಪಿ ಎಂಬುದರ ಪುನರ್ ಸೇರ್ಪಡೆ ಮಾಡಿ ಆದೇಶಿಸಿದೆ.

7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಭಾಗ-2ರಲ್ಲಿ ಭಕ್ತಿ ಪಂಥ ಎಂಬ ಅಧ್ಯಾಯದಲ್ಲಿ ಪುರಂದರ ದಾಸರು, ಕನಕದಾಸರ ಕುರಿತು ವಿಷಯಗಳನ್ನು ಸಂಕ್ಷಿಪ್ತಗೊಳಿಸಲಾಗಿದೆ. ಆದ್ದರಿಂದ, 2021-22ನೇ ಸಾಲಿನ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಸಂಪೂರ್ಣ ಪಾಠ ಸೇರ್ಪಡೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

7ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಪುಟ ಸಂಖ್ಯೆ 147ರಲ್ಲಿ 'ಗೊಂಬೆ ಕಲಿಸುವ ನೀತಿ ಪದ್ಯದ ಕೃತಿಕಾರರ ಹೆಸರು 'ಡಾ. ಆರ್. ಎನ್. ಜಯಗೋಪಾಲ್‌' ಎಂದು ತಪ್ಪಾಗಿ ಮುದ್ರಣಗೊಂಡಿದ್ದು, ಮೂಲ ಕೃತಿಕಾರರಾದ 'ಚಿ.ಉದಯಶಂಕರ್' ಅವರ ಕವಿ ಪರಿಚಯವನ್ನು ಸೇರಿಸಲಾಗಿದೆ.

6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಾಠ, 'ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ' ಪಾಠದಲ್ಲಿ ಸಿದ್ದಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠದ ಕುರಿತಾದ ಸೇವೆಯ ಸಾಲುಗಳು ಹಾಗೂ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಮೈಸೂರು ಮತ್ತು ಇತರ ಸಂಸ್ಥಾನಗಳು ಎಂಬ ಪಾಠದಲ್ಲಿದ್ದ ಸುರಪುರ ನಾಯಕರ ಕುರಿತಾದ ವಿವರಗಳನ್ನು ಸೇರಿಸಲಾಗಿದೆ.

9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ಭಾರತದ ಮತ ಪರಿವರ್ತಕರು ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯಾಂಶ ಹಾಗೂ 7ನೇ ತರಗತಿ ಸಮಾಜ ವಿಜ್ಞಾನ ಭಾಗ-2 ರ ಪಠ್ಯಪುಸ್ತಕದ 'ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿವಿವಾದಗಳು ಎಂಬ ಪಾಠದಲ್ಲಿ ರಾಷ್ಟ್ರಕವಿ ಕುವೆಂಪು ಹಾಗೂ ಹುಯಿಲಗೋಳ ನಾರಾಯಣರಾವ್‌ ಭಾವಚಿತ್ರಗಳನ್ನು ಸೇರಿಸಲಾಗಿದೆ.

4ನೇ ತರಗತಿಯ ಪರಿಸರ ಅಧ್ಯಯನ 'ಪ್ರತಿಯೊಬ್ಬರು ವಿಶಿಷ್ಟ' ಎಂಬ ಪಾಠದಲ್ಲಿ 'ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಕುವೆಂಪು ಅವರಿಗೆ ಚಿಕ್ಕಂದಿನಿಂದಲೂ ಕಥೆ, ಕವನ, ಪುಸ್ತಕ ಓದುವ, ಬರೆಯುವ ಅಭ್ಯಾಸ ಇತ್ತು ಎಂಬ ವಾಕ್ಯದ ನಂತರ 'ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು' ಎಂಬ ಸಾಲನ್ನು ಕೈಬಿಡಲಾಗಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...