ನಾಳೆ ಸೋಮವಾರ ಸಾರಿಗೆ ಸಂಚಾರ ಎಂದಿನಂತೆ. ಬಸ್ ಮತ್ತು ಸರ್ಕಾರಿ ಆಸ್ತಿಪಾಸ್ತಿ ಹಾನಿ ಮಾಡಿದರೆ ಎಚ್ಚರಿಕೆ : ಲಕ್ಷ್ಮಣ ಸವದಿ
ಬೆಂಗಳೂರು: ನಾಳೆ ಸೋಮವಾರದಂದು ರಾಜ್ಯದಲ್ಲಿ ಸಾರಿಗೆ ಸಂಚಾರ ಎಂದಿನಂತೆ ನಡೆಯಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟಿದೆ. ಆದರೆ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಬಸ್ ಸಂಚಾರ ಎಂದಿನಂತೆ ಮುಂದುವರೆಯಲಿದೆ. ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ ಎಂದರು.
ಬಂದ್ ಹಿನ್ನೆಲೆಯಲ್ಲಿ ಬಸ್ ಗಳಿಗೆ ಮತ್ತು ಸರ್ಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಹೆಚ್ಚಿನ ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ.
ಯಾರಾದರೂ ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟು ಮಾಡಲು ಪ್ರಯತ್ನಿಸಿದರೆ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ ಎಂದು ಸವದಿ ಎಚ್ಚರಿಕೆ ನೀಡಿದ್ದಾರೆ.