ಕಾವೇರಿ ವಿಚಾರದಲ್ಲಿ ಸರ್ವಪಕ್ಷ ಸಂಸದರ ಬೆಂಬಲ; ಡಿಕೆಶಿ
ಹೊಸದಿಲ್ಲಿ: ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತು ಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬುಧವಾರ ಹೊಸದಿಲ್ಲಿಯ ಖಾಸಗಿ ಹೊಟೇಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಸಂಸತ್ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಎಲ್ಲ ಸಂಸದರು ಭರವಸೆ ನೀಡಿದ್ದಾರೆ ಎಂದರು. ಮಂಗಳವಾರ ತಡರಾತ್ರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಹಾಗೂ ನಾನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪರಿಸ್ಥಿತಿ ವಿವರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಶಿವಕುಮಾರ್ ಹೇಳಿದರು.